ಕುಶಾಲನಗರ, ಫೆ 20: ಕುಶಾಲನಗರ ಪುರಸಭಾ ವ್ಯಾಪ್ತಿಗೆ ಆಗಮಿಸಿದ ಸಂವಿಧಾನ ಜಾಗೃತಿ ರಥವನ್ನು ಬರಮಾಡಿಕೊಳ್ಳಲಾಯಿತು.
ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ರಥವನ್ನು ಬರಮಾಡಿಕೊಂಡು
ಪುರಸಭೆ ವತಿಯಿಂದ ಗಂಧದಕೋಟಿ ಪ್ರವೇಶ ದ್ವಾರದಿಂದ ಜಾಗೃತಿ ಜಾಥಾಗೆ ಚಾಲನೆ ನೀಡಲಾಯಿತು.
ತಹಸೀಲ್ದಾರ್, ಪುರಸಭೆ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಜಾಥಾದಲ್ಲಿ ಭಾಗವಹಿಸಿದ್ದರು. ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿದ ಅಂಬೇಡ್ಕರ್ ಅವರ ಸ್ಥಬ್ದ ಚಿತ್ರ ಗಮನ ಸೆಳೆಯಿತು. ಜಾಥಾ ರಥ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ. ಕಾರು ನಿಲ್ಲಾಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದ ವೇದಿಕೆ ಬಳಿ ತಲುಪಿತು.
ಕಾರು ನಿಲ್ದಾಣದಲ್ಲಿ ನಡೆದ ಸಂವಿಧಾನ ದಿನಾಚರಣೆಯ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡುವ ಮೂಲಕ ವೇದಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ಕಿರಣ್ ಗೌರಯ್ಯ, ವೇದಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಂವಿಧಾನ ಪೀಠಿಕೆಯ ಪ್ರಮಾಣ ವಚನ ಬೋಧಿಸಿದರು. ನಂತರ ಮಾತನಾಡಿದ ಅವರು, ಸಂವಿಧಾನದ ಮಹತ್ವ ಮತ್ತು ಅದರ ಆಶಯಗಳನ್ನು ದೇಶದ ಪ್ರತಿಯೊಬ್ಬ ಪ್ರಜೆಗೂ ಅರಿವು ಮೂಡಿಸುವ ನಿಟ್ಟಿನಲ್ಲಿ ಸಂವಿಧಾನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ. ನಾಗರಿಕರು ಸಂವಿಧಾನದ ಮಹತ್ವವನ್ನು ಅರಿತು,ಅದರ ಆಶಯದಂತೆ ನಡೆದುಕೊಂಡರೆ ದೇಶವು ಅಭಿವೃದ್ಧಿಯ ಪಥದಲ್ಲಿ ಸಾಗುತ್ತದೆ. ಜತೆಗೆ ಸಮಾಜದಲ್ಲಿ ಶಾಂತಿ,ನೆಮ್ಮದಿ ನೆಲೆಸುತ್ತದೆ ಎಂದು ಹೇಳಿದರು.
ಮುಖ್ಯ ಭಾಷಣಕಾರರಾಗಿ ಆಗಮಿಸಿದ ಕೊಡಗು ವಿವಿ ಉಪನ್ಯಾಸಕ ಜಮೀರ್ ಅಹಮ್ಮದ್ ಮಾತನಾಡಿ, ಸಂವಿಧಾನವು ಶಿಕ್ಷಣ ಉದ್ಯೋಗ ಸಮಾನತೆ ಬದುಕು ಸಾಗಿಸಲು ಎಲ್ಲರಿಗೂ ಮುಕ್ತ ಅವಕಾಶ ನೀಡಿದೆ ಯಾವಾಗಲಾದರೂ ನಮ್ಮ ಹಕ್ಕಿಗೆ ಧಕ್ಕೆಯಾದರೆ ಅದರ ವಿರುದ್ಧ ಹೋರಾಡಲು ಸಂವಿಧಾನ ಅವಕಾಶ ನೀಡಿದೆ ಹಕ್ಕು ಮತ್ತು ಕರ್ತವ್ಯಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಲ್ಲರೂ ಒಂದಾಗಿ ಸಂವಿಧಾನದ ಆಶಯವನ್ನು ಈಡೇರಿಸಿ ಘನತೆಯಿಂದ ಬದುಕು ಸಾಗಿಸಬೇಕು ಎಂದು ಹೇಳಿದರು.
ಮದೆ ಮಹೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಿದ್ದರಾಜು ಮಾತನಾಡಿ, ಯಾವುದೇ ಜಾತಿಯಲ್ಲಿ ತುಳಿತಕ್ಕೊಳಗಾದ ಜನರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ, ಸಮ ಸಮಾಜ ನಿರ್ಮಾಣಕ್ಕೆ ಡಾ. ಬಾಬಾಸಾಹೇಬ ಅಂಬೇಡ್ಕರವರು ಸಂವಿಧಾನದಲ್ಲಿ ಅಡಕುಗಳನ್ನು ರಚಿಸಿ ನ್ಯಾಯ ಕೊಡಿಸಿದ್ದಾರೆ ಎಂದು ಹೇಳಿದರು. ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನದ ಮಹತ್ವವನ್ನು ಪ್ರತಿಯೊಬ್ಬರು ಅರಿತು ಇತರರಿಗೂ ತಿಳಿಸುವ ಮೂಲಕ ಪ್ರತಿಯೊಬ್ಬ ಭಾರತೀಯ ಪ್ರಜೆಯಲ್ಲೂ ಸಂವಿಧಾನದ ಜಾಗೃತಿ ಮೂಡಿಸಬೇಕಿದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಜಿಪಂ ಮಾಜಿ ಸದಸ್ಯ ವಿ.ಪಿ.ಶಶಿಧರ್, ಸಂವಿಧಾನ ಎಂಬುದು ಜೀವಸಂಕುಲಗಳ ಬದುಕನ್ನು ರಕ್ಷಿಸುತ್ತಾ, ಘನತೆಯ ಬದುಕನ್ನು ಕಟ್ಟಿಕೊಡುವ ಆಡಳಿತಾತ್ಮಕ ಕಾನೂನು. ಅಂಬೇಡ್ಕರ್ ಅವರು ತುಳಿತಕ್ಕೊಳಗಾದ ಮತ್ತು ಹಿಂದುಳಿದವರಿಗೆ ಪ್ರೇರಕ ಶಕ್ತಿಯಾಗಿದ್ದಾರೆ. “ನಾವು ತರ್ಕಬದ್ಧ ಚಿಂತನೆಯ ಮೂಲಕ ನಮ್ಮ ಹಕ್ಕುಗಳನ್ನು ಪಡೆಯಬೇಕು. ಭಾರತವು ಬಹುತ್ವದ ದೇಶವಾಗಿದ್ದು, ವಿವಿಧತೆಯಲ್ಲಿ ಏಕತೆಯನ್ನು ನಂಬುತ್ತದೆ. ನಾವು ನಮ್ಮ ಸಂವಿಧಾನವನ್ನು ರಕ್ಷಿಸಿದರೆ, ಸಂವಿಧಾನವು ನಮ್ಮನ್ನು ರಕ್ಷಿಸುತ್ತದೆ ಎಂದರು.
ಕಾರ್ಯಕ್ರಮಕ್ಕೆ ಮುನ್ನ ಕ್ರಾಂತಿ ಗೀತೆ ಹಾಡಲಾಯಿತು.
ಈ ಸಂದರ್ಭ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ, ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿ ಇ.ಓ.ಜಯಣ್ಣ, ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಪ್ರಸಾದ್, ಆರೋಗ್ಯ ನಿರೀಕ್ಷಕ ಉದಯಕುಮಾರ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸಿದ್ದೇಗೌಡ, ಮಹಿಳಾ ಮತ್ತು ಶಿಶು ಅಭಿವೃದ್ದಿ ಇಲಾಖೆಯ ಅಧಿಕಾರಿ ವಿಮಲ, ಕನ್ನಡ ಸಾಹಿತ್ಯ ಪರಿಷತ್ ಕುಶಾಲನಗರ ತಾಲ್ಲೂಕು ಅಧ್ಯಕ್ಷ ನಾಗೇಶ್, ಪುರಸಭೆ ಮಾಜಿ ಅಧ್ಯಕ್ಷ ಜಯವರ್ಧನ್, ಮಾಜಿ ಉಪಾಧ್ಯಕ್ಷೆ ಸುರಯ್ಯ ಬಾನು, ಸದಸ್ಯರಾದ ಸುರೇಶ್, ಆನಂದ್ ಕುಮಾರ್, ಜಯಲಕ್ಷ್ಮಮ್ಮ, ಕುಡಾ ಅಧಿಕಾರಿ ಸ್ವಾತಿ, ದಲಿತ ಸಂಘರ್ಷ ಸಮಿತಿ ಭೀಮವಾದ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ರಾಜ್ಯ ಸಂಘಟನಾ ಸಂಚಾಲಕ ಕೆ.ಬಿ.ರಾಜು, ದಲಿತ ಸಂಘರ್ಷ ಸಮಿತಿಯ ಪ್ರಮುಖರಾದ ನಿರ್ವಾಣಪ್ಪ, ಅಂಬೇಡ್ಕರ್ ಜನಪರ ವೇದಿಕೆಯ ಜಿಲ್ಲಾ ಅಧ್ಯಕ್ಷ ಜಯಪ್ರಕಾಶ್, ಸತೀಶ್, ಲೋಕೇಶ್, ವಾಲ್ಮಿಕಿ ಸಮಾಜದ ಅಧ್ಯಕ್ಷ ಅಶೋಕ್, ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತರು, ವಿವಿಧ ಶಾಲೆಯ ಮುಖ್ಯ ಶಿಕ್ಷಕರು,ಶಿಕ್ಷಕರು ಹಾಗೂ ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ವಿವಿಧ ಶಾಲೆಗಳಲ್ಲಿ ಏರ್ಪಡಿಸಿದ ಸಂವಿಧಾನ ಕುರಿತಾದ ಭಾಷಣ, ಪ್ರಬಂಧ ಸ್ಪರ್ದೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
Back to top button
error: Content is protected !!