ಪಿರಿಯಾಪಟ್ಟಣ ಆ 28 : ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸಲು ಪ್ರತಿಭಾ ಕಾರಂಜಿಯಂತ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಶಿವರಾಜ್ ತಿಳಿಸಿದರು.
ತಾಲ್ಲೂಕಿನ ಹುಣಸೆಕುಪ್ಪೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಆಯೋಜಿಸಿದ್ದ 2024–25ನೇ ಸಾಲಿನ ಮಾಲಂಗಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಮಕ್ಕಳಿಗೆ ಅಗತ್ಯವಾದ ಪ್ರೋತ್ಸಾಹ ನೀಡುವ ಮೂಲಕ ಅವರಲ್ಲಿರುವ ಜನಪದ ನೃತ್ಯ ಮತ್ತು ಗಾಯನ, ಚಿತ್ರಕಲೆ, ಪ್ರಬಂಧ, ಚರ್ಚಾಸ್ಪರ್ಧೆ, ಏಕಾಪಾತ್ರಾ ಅಭಿನಯ, ಸಾಮಾಜಿಕ ಮತ್ತು ಪೌರಾಣಿಕ ನಾಟಕಗಳು ಅನೇಕ ಕಲಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳನ್ನು ಅನಾವರಣಗೊಳಿಸಲು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಸಹಕಾರಿಯಾಗಿವೆ, ಜೊತೆಗೆ ವಿದ್ಯಾರ್ಥಿಗಳಲ್ಲಿ ಕಲಾಭಿರುಚಿಯ ಸಾಮರ್ಥ್ಯವನ್ನು ಸಾಬೀತು ಮಾಡಲು ಇದೊಂದು ಉತ್ತಮ ವೇದಿಕೆ ಎಂದರು.
ಹುಣಸೆ ಕುಪ್ಪೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಹೆಚ್.ಟಿ.ಗಣೇಶ್ ಮಾತನಾಡಿ ಪ್ರತಿಭಾ ಕಾರಂಜಿ ಎಂಬುದು ಕಲಾ ಪ್ರತಿಭೆಗಳ ಚಿಣ್ಣರ ಹಬ್ಬ, ಪೋಷಕರಿಗಲ್ಲದೆ ಸಾರ್ವಜನಿಕರು ಖುಷಿ ಪಡುವ ಹಬ್ಬ. ಮಕ್ಕಳ ಪ್ರತಿಭೆಯನ್ನು ತಂದೆ ತಾಯಿಗಳು ಹತ್ತಿರದಿಂದ ಕಣ್ಮುಂಬಿಕೊಳ್ಳುವ ವೇದಿಕೆಯಾಗಿದೆ. ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದವರೆಗೆ ಸ್ಪರ್ಧೆ ಇರುವುದರಿಂದ ಮಕ್ಕಳಿಗೆ ಉತ್ತಮ ತರಬೇತಿ ನೀಡಿ ಸಜ್ಜುಗೊಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಸರ್ಕಾರ ಬಿಸಿಯೂಟ, ಮೊಟ್ಟೆ ವಿತರಣೆ, ಉಚಿತ ಸೈಕಲ್ ಸೇರಿದಂತೆ ಆನೇಕ ಯೋಜನೆಗಳನ್ನು ಜಾರಿ ಮಾಡಿ ಗುಣಮಟ್ಟದ ಶಿಕ್ಷಣಕ್ಕೆ ಪ್ರಯತ್ನಿಸುತ್ತಿದ್ದು ಇದರ ಪ್ರಯೋಜನ ಪಡೆದುಕೊಳ್ಳಬೇಕು. 18 ವರ್ಷಗಳಿಂದ ಸರ್ಕಾರವು ಶಿಕ್ಷಣ ಇಲಾಖೆ ಮೂಲಕ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಒಂದರಿಂದ 10ನೇ ತರಗತಿ ಮಕ್ಕಳಿಗೆ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಮೂಲಕ ಅವರ ಪ್ರತಿಭೆ ಗುರುತಿಸುತ್ತಿದೆ. ಇದರ ಮೂಲಕ ಗ್ರಾಮೀಣ ಸೊಗಡಿನ ಸಾಂಸ್ಕೃತಿಕ ಅನಾವರಣಗೊಳಿಸಲು ಸಹಕಾರಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ವಿವಿಧ ಶಾಲೆಗಳ ಮಕ್ಕಳು ವಿವಿಧ ಸಾಂಸ್ಕೃತಿಕ ಹಾಗೂ ಪ್ರಯೋಗಾತ್ಮಕ ಕಾರ್ಯಕ್ರಮಗಳ ಮೂಲಕ ನೋಡುಗರ ಕಣ್ಮನ ಸೆಳೆದರು.
ಕಾರ್ಯಕ್ರಮದಲ್ಲಿ ಸಿಆರ್ಪಿ ಕೆ.ಪಿ.ಸುರೇಶ್, ಎಸ್ಡಿಎಂಸಿ ಅಧ್ಯಕ್ಷ ಶ್ರೀನಿವಾಸ್, ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹೆಚ್.ಕೆ ಶಿವಮೂರ್ತಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಹದೇವಪ್ಪ, ಉಪಾಧ್ಯಕ್ಷ ಅಶೋಕ್, ಸಾವಿತ್ರಿ ಬಾಯಿ ಫುಲೆ ಶಿಕ್ಷಕರ ಸಂಘದ ಅಧ್ಯಕ್ಷೆ ಗಾಯತ್ರಿ, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರಾದ ಶ್ರೀನಿವಾಸ್, ಬಡ್ತಿ ಮುಖ್ಯ ಶಿಕ್ಷಕ ಪ್ರಕಾಶ್, ಕಂದಾಯ ಇಲಾಖೆ ನಿವೃತ್ತ ಅಧಿಕಾರಿ ಸೋಮಶೇಖರ್, ಗ್ರಾಮದ ಯಜಮಾನರಾದ ಚಂದ್ರೇಗೌಡ, ವಿವಿಧ ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಗೂ ಶಿಕ್ಷಕರಾದ ಸಾಕಮ್ಮ, ಮೇರಿ , ಕುಮಾರ್, ಚಂದ್ರೇಗೌಡ, ರಮೇಶ್ ಅಣ್ಣಯ್ಯ, ಪೂರ್ಣಿಮಾ, ರಾಮಣ್ಣ, ಮಹೇಶ್, ಬಸವರಾಜು, ಮಂಜುನಾಥ್, ಶಿಲ್ಪಾ ಹಿರಿಯ ವಿದ್ಯಾರ್ಥಿಗಳು ಸೇರಿದಂತೆ ವಿವಿಧ ಶಾಲೆಗಳಿಂದ ಆಗಮಿಸಿದ ಶಿಕ್ಷಕರು, ಗ್ರಾಮಸ್ಥರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Back to top button
error: Content is protected !!