ಕಾರ್ಯಕ್ರಮ

ಹೆಬ್ಬಾಲೆಯಲ್ಲಿ ಸೆಸ್ಕ್ ಜಾಗೃತ ದಳದಿಂದ ಜಾಗೃತಿ ಕಾರ್ಯಕ್ರಮ

ಕುಶಾಲನಗರ, ಜ 22 : ಮನೆ,ಪಂಪ್ ಸೆಟ್ ಗಳಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆಯುವುದು ಮತ್ತು ಅದರಿಂದ ಉಂಟಾಗುವ ಅನಾಹುತಗಳ ಕುರಿತು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್) ಜಾಗೃತ ದಳದ ವತಿಯಿಂದ ಬುಧವಾರ ಹೆಬ್ಬಾಲೆ ಗ್ರಾಮದಲ್ಲಿ ರೈತರಿಗೆ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಲು ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.

ಸಮೀಪದ ಹೆಬ್ಬಾಲೆ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ವಿದ್ಯುತ್) (ಪ್ರಭಾರ) ಎಂ.ಜಗದೀಶ್, ಮನೆ ಅಥವಾ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕವನ್ನು ಅಕ್ರಮವಾಗಿ ಪಡೆಯುವುದು ಕಂಡುಬಂದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು. ಅಕ್ರಮವಾಗಿ ಸಂಪರ್ಕ ಪಡೆಯುವುದರಿಂದ ಉಂಟಾಗುವ ಅನಾಹುತಗಳ ಕುರಿತು ರೈತರು ಗ್ರಾಮೀಣ ಭಾಗದ ಜನರಿಗೆ ಅರಿವು ಮೂಡಿಸಲು ಸೆಸ್ಕ್‌ ಜಾಗೃತ ದಳದ ವತಿಯಿಂದ ವಿವಿಧೆಡೆ ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.
ಗ್ರಾಮೀಣ ಪ್ರದೇಶದ ರೈತರು ಹಾಗೂ ಕಾಡಂಚಿನ ಪ್ರದೇಶಗಳಲ್ಲಿರುವ ಜನರು ತಮ್ಮ ಜಮೀನುಗಳ ಮೇಲೆ ಹಾದು ಹೋಗಿರುವ ಮಾರ್ಗದ ಮೂಲಕ ತಂತಿಬೇಲಿಗಳಿಗೆ ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆಯುತ್ತಿದ್ದಾರೆ. ಇದರ ಪರಿಣಾಮ ಬಹುತೇಕ ಸಂದರ್ಭಗಳಲ್ಲಿ ಪ್ರಾಣ ಹಾನಿಯಾಗುವ ಘಟನೆಗಳೂ ನಡೆದಿವೆ. ಈ ಬಗ್ಗೆ ಪೊಲೀಸ್‌ ಇಲಾಖೆ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಹಲವು ಪ್ರಕರಣಗಳನ್ನು ದಾಖಲಿಸಿದ್ದಾರೆ.ಆದ್ದರಿಂದ ಮುಂದಿನ ದಿನಗಳಲ್ಲಿ ರೈತರು ತಮ್ಮ ಜಮೀನುಗಳಿಗೆ ಅಕ್ರಮವಾಗಿ ವಿದ್ಯುತ್‌ ಸಂಪರ್ಕ ನೀಡಿರುವುದು ಕಂಡುಬಂದಲ್ಲಿ ಹಾಗೂ ಅದರಿಂದ ಮನುಷ್ಯ ಅಥವಾ ವನ್ಯಜೀವಿಗಳು ಮೃತಪಟ್ಟಲ್ಲಿ ಸಂಬಂಧಪಟ್ಟವರನ್ನು ನೇರ ಹೊಣೆಗಾರರನ್ನಾಗಿ ಮಾಡಿ ವಿದ್ಯುತ್‌ ಕಾಯ್ದೆ ಅಡಿಯಲ್ಲಿ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವ ಮೂಲಕ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸೆಸ್ಕ್‌ ಜಾಗೃತ ದಳದ ಅಧಿಕಾರಿಗಳು ನಿರಂತರವಾಗಿ ಗಸ್ತು ನಡೆಸುತ್ತಿರುತ್ತಾರೆ. ಈ ಸಂದರ್ಭದಲ್ಲಿ ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವುದು ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ. ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವುದು ಕಂಡುಬಂದಲ್ಲಿ ಮಾಹಿತಿ ನೀಡಬಹುದು ಎಂದು ತಿಳಿಸಿದರು.
ಪೊಲೀಸ್ ನಿರೀಕ್ಷಕರು- 94495 98620,ಸಹಾಯಕ ಕಾರ್ಯಪಾಲಕ ಎಂಜಿನಿಯರ್ 9448494902.
ಈ ಸಂದರ್ಭ ಗ್ರಾಮ ಪಂಚಾಯತಿ ಅಧ್ಯಕ್ಷೆ ಅರುಣಾಕುಮಾರಿ, ಅಭಿವೃದ್ಧಿ ಅಧಿಕಾರಿ ಮೇದಪ್ಪ, ಸೆಸ್ಕ್ ನಿವೃತ್ತ ಎಂಜಿನಿಯರ್ ರಾಮಪ್ಪ,ಕುಶಾಲನಗರ ವಿಭಾಗದ ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಮಂಜುನಾಥ್, ಕೂಡಿಗೆ ಶಾಖಾಧಿಕಾರಿ ರಾಣಿ,ಸೆಸ್ಕ್ ಜಾಗೃತ ದಳದ ಪೊಲೀಸ್ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!