ಕುಶಾಲನಗರ, ಜೂ 06; ವಿದ್ಯಾರ್ಥಿ ಸಮೂಹ ದುಶ್ಚಟಗಳಿಗೆ ಬಲಿಯಾಗದೆ. ದುಶ್ಚಟಗಳ ವಿರುದ್ದ ಜಾಗೃತಿ ಮೂಡಿಸಿದರೆ ಮಾತ್ರ ದುಶ್ಚಟಗಳಂತಹ ಸಾಮಾಜಿಕ ಪಿಡುಗುಗಳು ನಿವಾರಣೆಯಾಗುತ್ತವೆ ಎಂದು ಕುಶಾಲನಗರ ಟೌನ್ ಠಾಣೆಯ ಇನ್ಸ್ ಪೆಕ್ಟರ್ ಬಿ.ಜಿ. ಪ್ರಕಾಶ್ ಅಭಿಪ್ರಾಯಪಟ್ಟರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಹಾಗೂ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ನಡೆದ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಅನೇಕ ದುಷ್ಪರಿಣಾಮ ಬೀರುತ್ತವೆ. ದುಶ್ಚಟಗಳಿಗೆ ಬಲಿಯಾಗಬಾರದು. ವಿದ್ಯಾರ್ಥಿ ದೆಸೆಯಲ್ಲಿ ಉತ್ತಮ ಅಭ್ಯಾಸ ರೂಢಿಸಿಕೊಳ್ಳಬೇಕು.
ಕಾಲೇಜು ದಿನಗಳಲ್ಲಿ ದುಶ್ಚಟಗಳಿಗೆ ಆಕರ್ಷಣೆಯಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಸಿಗರೇಟ್, ಗುಟ್ಕಾ ಮುಂತಾದ ತಂಬಾಕುಯುಕ್ತ ಪದಾರ್ಥ ಸೇವಿಸುವುದನ್ನು ತ್ಯಜಿಸಬೇಕು. ಇದರಿಂದ ಶೈಕ್ಷಣಿಕವಾಗಿ ಸಾಧನೆ ಮಾಡಲು ಸಾಧ್ಯ ಎಂದು ಕಿವಿಮಾತು ಹೇಳಿದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸದಸ್ಯ ಎಂ.ಎನ್. ಚಂದ್ರಮೋಹನ್ ಮಾತನಾಡಿ, ವಿದ್ಯಾರ್ಥಿ ಜೀವನವು ಭವಿಷ್ಯದ ಬದುಕನ್ನು ರೂಪಿಸಿಕೊಳ್ಳುವ ಮಹತ್ವದ ಘಟ್ಟವಾಗಿದೆ. ಈ ಹಂತದಲ್ಲಿ ಮಾದಕವಸ್ತು ಸೇರಿದಂತೆ ಆರೋಗ್ಯ ಮತ್ತು ಭವಿಷ್ಯಕ್ಕೆ ಮಾರಕವಾಗುವಂತಹ ಯಾವುದೇ ಚಟಗಳ ಆಕರ್ಷಣೆಗೆ ಒಳಗಾಗದೆ ದೂರವಿರಬೇಕು ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ತಾಲ್ಲೂಕು ಕ್ಷೇತ್ರ ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭ ಕಾಲೇಜು ಪ್ರಾಂಶುಪಾಲರಾದ ಡಾ. ನಾಗೇಂದ್ರಸ್ವಾಮಿ, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವಲಯ ಮೇಲ್ವಿಚಾರಕ ನಾಗರಾಜು, ಸೇವಾ ಪ್ರತಿನಿಧಿ ಜಯಲಕ್ಷ್ಮಿ ಹಾಗೂ ಮತ್ತಿತರರು ಹಾಜರಿದ್ದರು.
Back to top button
error: Content is protected !!