ಸುರಕ್ಷತಾ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ

ಕುಶಾಲನಗರ, ಸೆ 29: ಆನೆಕಾಡು ರಾಜ್ಯ ಹೆದ್ದಾರಿಯಲ್ಲಿ ಉಂಟಾಗುತ್ತಿರುವ ಅಪಘಾತಗಳನ್ನು ನಿಯಂತ್ರಿಸುವ ಸಂಬಂಧ ಶಾಸಕ ಡಾ.ಮಂತರ್ ಗೌಡ ಅವರು ಅಧಿಕಾರಿಗಳೊಂದಿಗೆ ಅಪಘಾತ ವಲಯಗಳನ್ನು ಖುದ್ದು ಪರಿಶೀಲನೆ ನಡೆಸಿದರು. ಇದಕ್ಕೂ ಮುನ್ನ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಧಿಕಾರಿಗಳ ಸಭೆ ಕುಶಾಲನಗರ ಪುರಸಭೆಯ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಮಾತನಾಡಿದ ಶಾಸಕ ಡಾ.ಮಂತರ್ ಗೌಡ ಅವರು, ಆನೆಕಾಡು ಬಳಿ ಅಪಘಾತಗಳು ದಿನೇ ದಿನೇ ಹೆಚ್ಚುತ್ತಿವೆ. ಇದಕ್ಕೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸದಿರುವುದೇ ಕಾರಣ. ಇಲ್ಲಿಯವರೆಗೆ ಹಲವು ಮಂದಿ ಆನೆಕಾಡು ಬಳಿ ಸಂಭವಿಸಿದ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ಇನ್ನು ಮುಂದೆ ಸಂಭವಿಸುವ ಪ್ರಾಣಹಾನಿಗಳಿಗೆ ಅಧಿಕಾರಿಗಳೇ ನೇರ ಹೊಣೆಯಾಗುತ್ತಾರೆ ಎಂದು ಎಚ್ಚರಿಕೆ ನೀಡಿದರು.
ಕೂಡಲೇ ಅಪಘಾತಗಳನ್ನು ತಡೆಗಟ್ಟುವ ದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಎಚ್ಚರಿಕೆ ಸೂಚನಾ ಫಲಕಗಳ ಅಳವಡಿಕೆ, ವೇಗ ನಿಯಂತ್ರಕಗಳ ನಿರ್ಮಾಣ ಸೇರಿದಂತೆ ಸಾಧ್ಯವಿರುವ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸಂದರ್ಭ ಕುಶಾಲನಗರ ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಕುಡಾ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ರಾಷ್ಟ್ರೀಯ ಹೆದ್ದಾರಿ ಸಹಾಯಕ ಕಾರ್ಯಪಾಲಕ ಅಭಿಯಂತರ ಸಂಜೀವ್ ಕುಮಾರ್, ಪುರಸಭೆ ಮುಖ್ಯಾಧಿಕಾರಿ ಗಿರೀಶ್ ಸೇರಿದಂತೆ ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.



