ಕುಶಾಲನಗರ: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಶಾಲನಗರ ಪುರಸಭೆಯ ವತಿಯಿಂದ ನಿರ್ಮಿಸಿರುವ ಸ್ವಾಗತ ಕಮಾನನ್ನು ತಕ್ಷಣ ತೆರವುಗೊಳಿಸಿ, ಪುರಸಭೆಯ ವ್ಯಾಪ್ತಿಯಲ್ಲಿ ಸೂಕ್ತ ಸ್ಥಳದಲ್ಲಿ ಅಳವಡಿಸಬೇಕು ಎಂದು ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರಾದ ಭಾಸ್ಕರ್ ನಾಯಕ್ ಅವರು ಆಗ್ರಹಿಸಿದ್ದಾರೆ.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಾಗತ ಕಮಾನು ನಿರ್ಮಿಸಿರುವುದು ಪಂಚಾಯಿತಿಯ ಆಸ್ತಿ ಹಾಗೂ ಆಡಳಿತಾತ್ಮಕ ವ್ಯಾಪ್ತಿಯ ವಿಚಾರದಲ್ಲಿ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಕಾಮಗಾರಿ ಪ್ರಾರಂಭದ ಹಂತದಲ್ಲಿಯೇ ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಅವರು ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ನೋಟಿಸ್ ನೀಡಿದ್ದರೂ, ಅದನ್ನು ಲೆಕ್ಕಿಸದೆ ಸ್ವಾಗತ ಕಮಾನು ನಿರ್ಮಿಸಿರುವುದು ಖಂಡನೀಯವಾಗಿದೆ ಎಂದು ಅವರು ತಿಳಿಸಿದ್ದಾರೆ.
ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿರುವ ಆಸ್ತಿ ಹಾಗೂ ಹಕ್ಕುಗಳನ್ನು ರಕ್ಷಿಸುವುದು ಸಂಬಂಧಪಟ್ಟ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಈ ವಿಚಾರದಲ್ಲಿ ಪಂಚಾಯಿತಿ ನೀಡಿದ ನೋಟಿಸ್ಗೆ ಸೂಕ್ತ ಸ್ಪಂದನೆ ನೀಡದೆ ಕಾಮಗಾರಿ ಮುಂದುವರಿಸಿರುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸ್ಪಷ್ಟನೆ ನೀಡಬೇಕು. ಕೂಡಲೇ ಸ್ವಾಗತ ಕಮಾನನ್ನು ತೆರವುಗೊಳಿಸಿ, ಪುರಸಭೆಯ ವ್ಯಾಪ್ತಿಯಲ್ಲಿ ಅಳವಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಗ್ರಾಮ ಪಂಚಾಯಿತಿ ಆಸ್ತಿಯ ರಕ್ಷಣೆಯ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡು ಸ್ವಾಗತ ಕಮಾನನ್ನು ತೆರವುಗೊಳಿಸದಿದ್ದರೆ, ಗ್ರಾಮ ಪಂಚಾಯಿತಿ ಆಸ್ತಿ ಉಳಿವಿಗಾಗಿ ಸಾರ್ವಜನಿಕರನ್ನು ಒಗ್ಗೂಡಿಸಿ ವಿನೂತನ ರೀತಿಯ ಪ್ರತಿಭಟನೆ ನಡೆಸಲಾಗುವುದು ಎಂದು ಭಾಸ್ಕರ್ ನಾಯಕ್ ಅವರು ಎಚ್ಚರಿಕೆ ನೀಡಿದ್ದಾರೆ.
Back to top button
error: Content is protected !!