ಕಾಮಗಾರಿ

ಮಾವಿನಹಳ್ಳ ಭಾಗದ ರಸ್ತೆ ಅಭಿವೃದ್ಧಿಗೆ ₹14 ಲಕ್ಷ ಅನುದಾನ: ಒಂದೇ ತಿಂಗಳಲ್ಲಿ ಕಾಮಗಾರಿ ಪೂರ್ಣ

ಶಾಸಕ ಡಾ. ಮಂತರ್ ಗೌಡರ ಕಾರ್ಯವೈಖರಿಗೆ ಜೇನುಕುರುಬ ಸಮುದಾಯದ ಮುಖಂಡ ಕಾಳಿಂಗ ಹಾಗೂ ಗ್ರಾಮಸ್ಥರ ಮೆಚ್ಚುಗೆ

ನಂಜರಾಯಪಟ್ಟಣ: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಂಗಸಮುದ್ರ ಗ್ರಾಮದ ಮಾವಿನಹಳ್ಳ ಭಾಗದಲ್ಲಿ ಪರಿಶಿಷ್ಟ ಪಂಗಡದ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದು, ಹಲವು ವರ್ಷಗಳಿಂದ ಮೂಲಭೂತ ಸೌಕರ್ಯಗಳ ಕೊರತೆಯನ್ನು ಎದುರಿಸುತ್ತಿದ್ದರು.

ಈ ಭಾಗದ ರಸ್ತೆ ಸೇರಿದಂತೆ ವಿವಿಧ ಮೂಲಸೌಕರ್ಯ ಸಮಸ್ಯೆಗಳನ್ನು ಹಲವು ಬಾರಿ ಕ್ರಿಯಾಯೋಜನೆ ಪಟ್ಟಿಗೆ ಸೇರಿಸಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ ಎಂದು ಜೇನುಕುರುಬ ಸಮುದಾಯದ ಕೊಡಗು ಜಿಲ್ಲಾಧ್ಯಕ್ಷ ಕಾಳಿಂಗ ಅವರು ಅಸಮಾಧಾನ ವ್ಯಕ್ತಪಡಿಸಿದ್ದರು.

ಸ್ಥಳೀಯರು ಎದುರಿಸುತ್ತಿದ್ದ ರಸ್ತೆ ಸಮಸ್ಯೆಯನ್ನು ಶಾಸಕ ಡಾ. ಮಂತರ್ ಗೌಡ ಅವರ ಗಮನಕ್ಕೆ ತಂದ ಕೂಡಲೇ ಸ್ಪಂದಿಸಿದ ಶಾಸಕರು, ಮೊದಲ ಹಂತದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ₹14 ಲಕ್ಷ ಅನುದಾನ ಮಂಜೂರು ಮಾಡಿದ್ದಾರೆ. ಅದರಂತೆ ಕಾಮಗಾರಿಯ ಜವಾಬ್ದಾರಿ ವಹಿಸಿಕೊಂಡ KRIDL ಸಂಸ್ಥೆಯ ಮಡಿಕೇರಿ ವಿಭಾಗವು ಕೇವಲ ಒಂದೇ ತಿಂಗಳ ಅವಧಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಿದೆ.

ದೀರ್ಘಕಾಲದಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ರಸ್ತೆ ಸಮಸ್ಯೆಗೆ ಶೀಘ್ರ ಪರಿಹಾರ ದೊರೆತಿರುವುದಕ್ಕೆ ಜೇನುಕುರುಬ ಸಮುದಾಯದ ಮುಖಂಡ ಕಾಳಿಂಗ ಹಾಗೂ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿ, ಶಾಸಕರ ತ್ವರಿತ ಸ್ಪಂದನೆ ಮತ್ತು ಕಾರ್ಯವೈಖರಿಯನ್ನು ಶ್ಲಾಘಿಸಿದ್ದಾರೆ.

ಇದೇ ಸಂದರ್ಭದಲ್ಲಿ, ಇತರೆ ಪರಿಶಿಷ್ಟ ಪಂಗಡದ ಜನರು ವಾಸಿಸುವ ಹಾಡಿಗಳಲ್ಲಿಯೂ ಇರುವ ಕುಡಿಯುವ ನೀರು, ರಸ್ತೆ, ವಿದ್ಯುತ್ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳ ಸಮಸ್ಯೆಗಳನ್ನು ಪಟ್ಟಿ ಮಾಡಿ ತಮ್ಮ ಗಮನಕ್ಕೆ ತರುವಂತೆ ಕಾಳಿಂಗ ಅವರಿಗೆ ಶಾಸಕರು ಮನವಿ ಮಾಡಿದ್ದಾರೆ. ಹಾಡಿಗಳ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ದೀರ್ಘಕಾಲದ ಬೇಡಿಕೆಗೆ ಸ್ಪಂದಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿರುವುದು ಮಾವಿನಹಳ್ಳಿ ಭಾಗದ ಗ್ರಾಮಸ್ಥರಲ್ಲಿ ಆಶಾಭಾವನೆ ಮೂಡಿಸಿದೆ. ಇನ್ನುಳಿದ ಹಾಡಿಗಳ ಮೂಲಸೌಕರ್ಯ ಸಮಸ್ಯೆಗಳಿಗೂ ಇದೇ ರೀತಿ ಶೀಘ್ರ ಪರಿಹಾರ ದೊರೆಯಲಿದೆ ಎಂಬ ನಿರೀಕ್ಷೆ ಸ್ಥಳೀಯರದ್ದಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!