ಕುಶಾಲನಗರ, ನ 26: ಕುಶಾಲನಗರ ತಾಲ್ಲೂಕಿನ ಹೆಬ್ಬಾಲೆ ಗ್ರಾಮದ ಐತಿಹಾಸಿಕ ಹಿನ್ನೆಲೆ ಹೊಂದಿರುವ ಗ್ರಾಮ ದೇವತೆ ಶ್ರೀ ಬನಶಂಕರಿ ಅಮ್ಮನವರ ವಾರ್ಷಿಕ ಉತ್ಸವ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.
ಶ್ರೀ ಬನಶಂಕರಿ ಅಮ್ಮನವರ ದೇವಸ್ಥಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನ ಹಾಗೂ ಶ್ರೀ ರಾಮಲಿಂಗೇಶ್ವರ ದೇವಸ್ಥಾನ ಸಮಿತಿ ಹಾಗೂ ಗ್ರಾಮಸ್ಥರ ವತಿಯಿಂದ ಕಾರ್ತಿಕ ಮಾಸ ಕೃಷ್ಣ ಪಕ್ಷ ಅಮಾವಾಸೆಯಂದು ಶುಕ್ರವಾರ ರಾತ್ರಿ ಶಕ್ತಿ ಸ್ವರೂಪಿಣಿ ಬನಶಂಕರಿ ದೇವಿಗೆ ವಿಶೇಷ ಪೂಜೆ ನೆರವೇರಿತು. ಪ್ರತಿವರ್ಷದಂತೆ ಅಮ್ಮನವರ ಸನ್ನಿಧಿಯಲ್ಲಿ ಬೆಳಿಗ್ಗೆ 7 ಘಂಟೆಗೆ ಗಣಪತಿ ಪೂಜೆ,ಪುಣಾಹಃ ರಕ್ಷಾಬಂಧನ ಧ್ವಜಾರೋಹಣ ನವಗ್ರಹ ಸ್ಥಾಪನೆ, ನವಗ್ರಹ ಪೂಜೆ ಮಹಾ ಮಂಗಳಾರತಿ ಸೇರಿದಂತೆ ಇನ್ನಿತರ ಪೂಜಾ ಕೈಂಕರ್ಯಗಳು ದೇವಾಲಯದ ಪ್ರಧಾನ ಅರ್ಚಕ ಕೃಷ್ಣಮೂರ್ತಿ ನೇತೃತ್ವದಲ್ಲಿ ನಡೆಯಿತು. ಗ್ರಾಮದಲ್ಲಿ ದೇವಿಯ ವಾರ್ಷಿ ಕ ಹಬ್ಬದ ಅಂಗವಾಗಿ ಪವಿತ್ರ ಬನದಲ್ಲಿರುವ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಬೆಳಿಗ್ಗೆ ಕಳಶ ಸ್ಥಾಪಿಸುವುದರೊಂದಿಗೆ ವಿವಿಧ ಕಾರ್ಯಗಳು ದೇವಸ್ಥಾನ ಸಮಿತಿ ಅಧ್ಯಕ್ಷ ಯಜಮಾನ್ ಎಚ್.ಎನ್.ಬಸವರಾಜು ಹಾಗೂ ಎಚ್.ಪಿ.ರಾಜಪ್ಪ ಹಾಗೂ ಸಮಿತಿ ಪದಾಧಿಕಾರಿಗಳು, ಸದಸ್ಯರ ನೇತೃತ್ವದಲ್ಲಿ ನಡೆಯಿತು. ಸಂಜೆ 4 ಗಂಟೆಗೆ ಕ್ಷೀರಾಭಿಷೇಕ, ಗಣಪತಿ ಪೂಜೆ ನಂತರ ದೇವಿಯನ್ನು ಅಲಂಕರಿಸಿ. ರಾತ್ರಿ 8 ಗಂಟೆಗೆ ಬನದಲ್ಲಿ ಅಗ್ನಿಕುಂಡ ಸ್ಥಾಪಿಸಿ. ಹರಕೆ ಹೊತ್ತ ಭಕ್ತಾದಿಗಳು ಅಗ್ನಿಕುಂಡ ತುಳಿದು ದೇವಿ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಹಬ್ಬದ ಅಂಗವಗಿ ಗ್ರಾಮವನ್ನು ಹಸಿರು ತಳಿರು ತೋರಣಗಳಿಂದ ಹಾಗೂ ದೇವಸ್ಥಾನಗಳನ್ನು ವಿದ್ಯುತ್ ದೀಪಗಳಿಂದ ಸಿಂಗರಿಸಲಾಗಿತ್ತು. ರಾತ್ರಿ 10.30 ಗಂಟೆ ವೇಳೆಗೆ ಗ್ರಾಮದ ಶ್ರೀ ಬಸವೇಶ್ವರ ದೇವಾಲಯದ ಬಳಿಯಿಂದ ವಿದ್ಯುತ್ ಅಲಂಕೃತ ಮಂಟಪದಲ್ಲಿ ಬನಶಂಕರಿ ದೇವಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿ ನಂತರ ಉತ್ಸವವನ್ನು ನೆರವಣಿಗೆ ಮೂಲಕ ಪವಿತ್ರ ಬನಕ್ಕೆ ಕೊಂಡೊಯ್ಯಲಾಯಿತು. ಇಷ್ಟಾರ್ಥ ನೆರವೇರಿಸು ತಾಯೇ ಎಂದು 9 ದಿವಸ ಉಪವಾಸ ವ್ರತ ಆಚರಿಸಿ ಅಂದು ಉತ್ಸವಗಳೊಂದಿಗೆ ಮೆರವಣಿಗೆಯಲ್ಲಿ ತಾಯಿಯ ಬನಕ್ಕೆ ಆಗಮಿಸುವ ಭಕ್ತರು ಅಗ್ನಿಕುಂಡ ತುಳಿದು ದೇವಿಗೆ ಹಣ್ಣತುಪ್ಪ ಅಭಿಷೇಕ ಮಾಡಿ ಆರ್ಶೀವಾದವನ್ನು ಪಡೆದು ದೇವಿಗೆ ಕೃಪೆಗೆ ಪಾತ್ರರಾದರು. ದೇವಿಯ ಉತ್ಸವದೊಂದಿಗೆ ಗ್ರಾಮದ ಇತರೆ ಭಾಗಗಳಿಂದ ಹೊರಟ ಉತ್ಸವ ಮಂಟಪಗಳ ಶೋಭಾಯಾತ್ರೆಯು ಹಬ್ಬಕ್ಕೆ ವಿಶೇಷ ಮೆರಗು ನೀಡಿತು. ಮಡಿಕೇರಿ ದಸರಾ ಮಾದರಿಯಲ್ಲಿಯೇ ನಡೆದ ಉತ್ಸವಗಳ ಮೆರವಣಿಗೆ ಗ್ರಾಮದೇವತೆ ಹಬ್ಬಕ್ಕೆ ವಿಶೇಷ ಮೆರಗು ನೀಡಿತು. ಮೆರವಣಿಗೆ ಸಂದರ್ಭ ವೀರಗಾಸೆ ವೀರಭದ್ರೇಶ್ವರ ಕುಣಿತ ಹಾಗೂ ಕಂಸಾಳೆ ನೃತ್ಯ ಪ್ರದರ್ಶನ ಎಲ್ಲರ ಗಮನ ಸೆಳೆಯಿತು. ಮೆರವಣಿಗೆ ಸಂದರ್ಭ ಗ್ರಾಮದ ಬಸ್ ನಿಲ್ದಾಣದ ಬಳಿ ಸಿಡಿಸುವ ಬಣ್ಣ ಬಣ್ಣದ ಆಕರ್ಷಕ ಮದ್ದುಗುಂಡುಗಳ ಪ್ರದರ್ಶನ ಹಾಗೂ ಬಾಣ ಬಿರುಸುಗಳ ಚಿತ್ತಾರ ನೋಡುಗರ ಕಣ್ಮನ ಸೆಳೆಯಿತು.
Back to top button
error: Content is protected !!