ಕುಶಾಲನಗರ, ಸೆ 22: ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶ್ರಮವಹಿಸುವ ಶಿಕ್ಷಕ ವೃಂದಕ್ಕೆ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಹೆಚ್ಚಿನ ಚೈತನ್ಯ ನೀಡುತ್ತದೆ ಎಂದು ಸೋಮವಾರಪೇಟೆ ತಾಲ್ಲೂಕು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ವಿ.ಮಂಜೇಶ್ ಹೇಳಿದರು.
ಜಿಲ್ಲಾ ಪಂಚಾಯತಿ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘದ ಸಂಯುಕ್ತಾಶ್ರಯದಲ್ಲಿ ಶಿಕ್ಷಕ ದಿನಾಚರಣೆ ಅಂಗವಾಗಿ ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲಾ ಮೈದಾನದಲ್ಲಿ ಏರ್ಪಡಿಸಿದ್ದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಕರು ಶಾಲೆಯಲ್ಲಿ ಮಕ್ಕಳ ಪ್ರತಿಭೆಗಳನ್ನು ಗುರುತಿಸಿ ಪೋತ್ಸಾಹಿಸುವುದಲ್ಲಿ ಹೆಚ್ಚಿನ ಗಮನವಿರಿಸುವುದರಿಂದ ಬಹುತೇಕ ಸಂದರ್ಭಗಳಲ್ಲಿ ತಮ್ಮ ಆಸಕ್ತಿಯ ಕ್ರೀಡೆ, ಹವ್ಯಾಸಗಳನ್ನು ಮರೆತು ಬಿಟ್ಟಿರುತ್ತಾರೆ. ಹೀಗಾಗಿ ಇಂತಹ ಕ್ರೀಡಾಕೂಟಗಳು ವೃತ್ತಿ ಜೀವನದಲ್ಲಿ ಚಿರಸ್ಮರಣಿಯವಾಗಿ ಉಳಿಯುತ್ತವೆ ಎಂದರು.
ರಾಜ್ಯ ಪ್ರಾಥಮಿಕ ಶಾಲಾ ಸಹ ಶಿಕ್ಷಕ ಸಂಘದ ಕೊಡಗು ಘಟಕದ ಅಧ್ಯಕ್ಷ ಎಚ್.ಎನ್.ಮಂಜುನಾಥ್ ಮಾತನಾಡಿ, ಈ ಕ್ರೀಡಾಕೂಟ ಶಿಕ್ಷಕರಿಗೆ ಒತ್ತಡ ನಿಯಂತ್ರಣಕ್ಕೆ ಅವಕಾಶ ಮಾಡಿಕೊಡಲು ಸಹಕಾರಿಯಾಗಿದೆ ಎಂದರು.
ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘದ ಸೋಮವಾರಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಆರ್.ರತ್ನಕುಮಾರ್ ಮಾತನಾಡಿ, ಶಿಕ್ಷಕರಿಗೆ ಹಮ್ಮಿಕೊಂಡಿರುವ ಕ್ರೀಡಾ ಚಟುವಟಿಕೆಗಳ ಬಗ್ಗೆ ಮಾಹಿತಿ ಒದಗಿಸಿದರು.
ಪ್ರಾಥಮಿಕ ಶಾಲಾ ಸಹ ಶಿಕ್ಷಕ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಟಿ.ಕೆ.ಬಸವರಾಜು ಮಾತನಾಡಿ, 26 ರಂದು ಸೋಮವಾರಪೇಟೆಯಲ್ಲಿ ಹಮ್ಮಿಕೊಂಡಿರುವ ಶಿಕ್ಷಕರ ದಿನಾಚರಣೆ ಅಂಗವಾಗಿ ವಿವಿಧ ಆಟೋಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ನಡೆಯುತ್ತಿದ್ದು ಸೋಮವಾರಪೇಟೆ ಕ್ಷೇತ್ರದ ಶಿಕ್ಷಕ ವೃಂದ ಸಂಭ್ರಮದಿಂದ ಪಾಲ್ಗೊಂಡಿದೆ ಎಂದು ತಿಳಿಸಿದರು.
ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಸಂಘದ ಕೊಡಗು ಘಟಕದ ಉಪಾಧ್ಯಕ್ಷೆ ಎಸ್.ಕೆ.ಸೌಭಾಗ್ಯ, ನಿರ್ದೇಶಕರು ಉಮಾದೇವಿ, ಎಸ್.ಎಂ.ಆಶಾ, ಪ್ರಧಾನ ಕಾರ್ಯದರ್ಶಿ ಜಿ.ಪಿ. ಕವಿತಾ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಕೆ.ಕುಮಾರ್, ತಾಲ್ಲೂಕು ನೌಕರರ ಸಂಘದ ಅಧ್ಯಕ್ಷ ಪ್ರದೀಪ್, ಗೌರವ ಅಧ್ಯಕ್ಷ ಪ್ರಸನ್ನಕುಮಾರ್, ಖಜಾಂಜಿ ವಿ.ಜಿ.ದಿನೇಶ್,ನಿರ್ದೇಶಕ ಎನ್.ಎಂ.ನಾಗೇಶ್, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಸುಕುಮಾರಿ,ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಪ್ರಕಾಶ್,ಕ್ಷೇತ್ರ ಶಿಕ್ಷಣ ಸಂಯೋಜಕ ಶೇಖರ್,ಇಸಿಒ ರಾಮಕೃಷ್ಣ,ಬಿಆರ್ಪಿ ಶಿವಕುಮಾರ್, ಲೋಕೇಶ್, ತಾಲ್ಲೂಕು ಪ್ರೌಢಶಾಲಾ ಶಿಕ್ಷಕ ಸಂಘದ ಕಾರ್ಯದರ್ಶಿ ಟಿ.ವಿ.ಶೈಲಾ,ವಿವಿದ ಸಂಸ್ಥೆಗಳ ಪದಾಧಿಕಾರಿಗಳಾದ ಕರುಬಂಯ್ಯ,ಯೋಗೇಶ್,ದಯಾನಂದ ಪ್ರಕಾಶ್,ಶಿವಶಂಕರ್ ಇದ್ದರು. ಶಿಕ್ಷಕರಿಗೆ ಕಬಡ್ಡಿ, ಹಗ್ಗಜಗ್ಗಾಟ, ವಾಲಿಬಾಲ್, ಥ್ರೋಬಾಲ್, ಮ್ಯೂಸಿಕಲ್ ಛೇರ್ ಹಗ್ಗ ಜಗ್ಗಾಟದಲ್ಲಿ ಹಾಗೂ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ನಡೆಯಿತು.
Back to top button
error: Content is protected !!