ಕುಶಾಲನಗರ ಅ 30: ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಸೀಗೆಹೊಸೂರು ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಆಯೋಜಿಸಲಾಯಿತು.
ವಿದ್ಯಾರ್ಥಿಗಳ ಕಲಿಕೆಯ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಪೋಷಕರ ಪಾತ್ರವು ಮುಖ್ಯ ವಾಗಿರುತ್ತದೆ ಎಂದು ಶಾಲಾ ಮುಖ್ಯ ಶಿಕ್ಷಕಿ ಕೆ.ಡಿ.ತಾರಾಮಣಿ ಅಭಿಪ್ರಾಯ ವ್ಯಕ್ತಪಡಿಸಿದರು.
ಶಿಕ್ಷಣ ಮಕ್ಕಳ ಜೀವನವನ್ನು ಅತ್ಯುತ್ತಮವಾಗಿ ರೂಪಿಸುವುದರ ಜೊತೆಗೆ ಪ್ರತಿಯೊಬ್ಬ ವಿದ್ಯಾರ್ಥಿಯೂ ಕೂಡ ಉತ್ತಮ ಶಿಕ್ಷಣ ಪಡೆಯುವತ್ತ ಗಮನಹರಿಸಬೇಕು. ಇದಕ್ಕೆ ಪೋಷಕರ ಮಾರ್ಗದರ್ಶನ ಅಗತ್ಯ. ವಿದ್ಯಾರ್ಥಿಗಳು ಯಾವುದೇ ಸಮಸ್ಯೆಗಳಿದ್ದರೂ ಶಿಕ್ಷಕರ ಬಳಿ ಬಗೆಹರಿಸಿಕೊಳ್ಳಬೇಕು ಎಂದು ಹೇಳಿದರು.
ಮಾರ್ಗದರ್ಶಿ ಶಿಕ್ಷಕರಾಗಿ ಕೂಡಿಗೆಯ ಮೊರಾರ್ಜಿ ಶಾಲೆಯ ದಿನೇಶ್ ಆಚಾರಿ ಪಾಲ್ಗೊಂಡು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮೊಬೈಲ್ ಗೀಳು ಹೆಚ್ಚಾಗಿದೆ. ಇದರಿಂದ ವಿದ್ಯಾರ್ಥಿಗಳು ಓದಿನತ್ತ ಆಸಕ್ತಿ ಕಳೆದುಕೊಳ್ಳುತ್ತಿದ್ದಾರೆ. ಪೋಷಕರು ಮಕ್ಕಳನ್ನು ಮೊಬೈಲ್ನಿಂದ ದೂರ ಇರುವಂತೆ ನೋಡಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಅಗತ್ಯ ಮಾರ್ಗದರ್ಶನ ನೀಡುವುದು ಶಿಕ್ಷಕರ ಕರ್ತವ್ಯ ಮಾತ್ರವಲ್ಲ, ಅದು ಪೋಷಕರ ಜವಾಬ್ದಾರಿಯಾಗಿರುತ್ತದೆ. ಇದನ್ನು ಅರಿತು ಪೋಷಕರು ತಮ್ಮ ಮಕ್ಕಳ ಉತ್ತಮ ಭವಿಷ್ಯದ ಬಗ್ಗೆ ಗಮನಹರಿಸಬೇಕು. ಕೇವಲ ಪಠ್ಯ ಮಾತ್ರವಲ್ಲ ಪಠ್ಯೇತರ ಚಟುವಟಿಕೆಗಳಿಗೆ ಒತ್ತು ನೀಡಬೇಕು ಎಂದು ಹೇಳಿದರು.
ಈ ಸಂದರ್ಭ ಶಾಲಾ ಅಭಿವೃದ್ದಿ ಸಮಿತಿ ಅಧ್ಯಕ್ಷೆ ಧರಣಿ, ಶಿಕ್ಷಕರಾದ ಟಿ.ಎಸ್.ವಿನೋಧ ಹೆಚ್.ವಿ.ಲತಾಮಣಿ, ಎಸ್.ಆರ್.ಸುನೀತಾ, ಎಸ್ .ಡಿ.ಎಂ.ಸಿ. ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು.
Back to top button
error: Content is protected !!