ಕುಶಾಲನಗರ ಡಿ 10: ಕೂಡಿಗೆ ಸರಕಾರಿ ಪದವಿಪೂರ್ವ ಕಾಲೇಜಿನ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಕೆ . ಕೆ. ನಾಗರಾಜಶೆಟ್ಟಿ ನೆರವೇರಿಸಿದರು. ನಂತರ ಮಾತನಾಡಿದ ಅವರು, ವಿಧ್ಯಾರ್ಥಿಗಳು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಕ್ರಿಯಾಶೀಲತೆಯನ್ನು ಮೈಗೊಡಿಸಿಕೊಳ್ಳಬೇಕು. ಇಂದಿನ ಪೈಪೋಟಿ ಯುಗದಲ್ಲಿ ವಿದ್ಯಾರ್ಥಿಗಳು ಹೆಚ್ಚು ಅಧ್ಯಯನಶೀಲರಾಗುವ ಜೊತೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾಲ್ಗೊಂಡು ಉದ್ಯೋಗ ಕಂಡುಕೊಳ್ಳಲು ಪ್ರಯತ್ನಿಸಬೇಕು ಎಂದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಭಾಗಮಂಡಲ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎ. ಸಿ. ದಿವಾಕರ್ ಮಾತನಾಡಿ, ವಿದ್ಯಾರ್ಥಿಗಳ ಜೀವನದಲ್ಲಿ ಸ್ಪಷ್ಟವಾದ ಗುರಿಯೊಂದಿಗೆ ಸಾಗಿದರೆ ಅದರ ಯಶಸ್ಸನ್ನು ಕಾಣಬಹುದು. ಜೊತೆಯಲ್ಲಿ ಕಠಿಣ ಪರಿಶ್ರಮ ವಿದ್ಯಾರ್ಥಿ ಜೀವನಕ್ಕೆ ಅತಿ ಮುಖ್ಯವಾಗಿರುತ್ತದೆ. ಶಿಕ್ಷಣಕ್ಕೆ ಶಿಸ್ತು ಮುಖ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲ ಡಾ. ಕೆ.ಬಿ. ಬಸಪ್ಪ ವಹಿಸಿ ಮಾತನಾಡಿದರು.
ಈ ಸಂದರ್ಭ ಅಭಿವೃದ್ಧಿ ಸಮಿತಿಯ ಸದಸ್ಯರಾದ ಎಂ.ಜೆ.ಮಹೇಶ್, ಜನಾರ್ಧನ, ಉಪನ್ಯಾಸಕರಾದ ಕಾವೇರಮ್ಮ, ನಾಗಪ್ಪ, ರಮೇಶ್, ಸತೀಶ್, ರವೀಶ್ ಸೇರಿದಂತೆ ಉಪನ್ಯಾಸಕ ವೃಂದದವರು ಹಾಜರಿದ್ದರು.
ಕಾಲೇಜಿನ ವಾರ್ಷಿಕ ವರದಿಯನ್ನು ಉಪನ್ಯಾಸಕ ಸತೀಶ್ ವಾಚಿಸಿದರು.
ಅತಿಥಿಗಳಿಂದ ಸಾಂಸ್ಕೃತಿಕ ಮತ್ತು ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಣೆ ಮಾಡಲಾಯಿತು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
Back to top button
error: Content is protected !!