ಕುಶಾಲನಗರ, ಮಾ 26: ಶನಿವಾರ ಸಂತೆಯಲ್ಲಿ ಏಪ್ರಿಲ್ 3 ರಂದು ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ಜಿಲ್ಲಾ ಮಹಿಳಾ ಘಟಕದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ಅಕ್ಕನ ಜಯಂತಿ ಮತ್ತು ಸಿದ್ದಗಂಗಾ ಶಿವಕುಮಾರ ಸ್ವಾಮೀಜಿಗಳ ಜಯಂತ್ಯೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಿದೆ ಎಂದು ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಹೆಚ್.ವಿ.ಶಿವಪ್ಪ ತಿಳಿಸಿದರು.
ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏಪ್ರಿಲ್ 3 ರಂದು, ಬೆಳಿಗ್ಗೆ 10:30ಕ್ಕೆ ಶನಿವಾರ ಸಂತೆಯ ನಂದೀಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ಅಕ್ಕಮಹಾದೇವಿ ಜಯಂತಿ, ಶತಾಯುಷಿ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಗಳ ಜಯಂತಿ ಉತ್ಸವದ ಕಾರ್ಯಕ್ರಮಗಳನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಹಿಳಾ ವಿಭಾಗದ ರಾಷ್ಟ್ರೀಯ ಅಧ್ಯಕ್ಷೆ ವೀಣಾ ವಿ ಕಾಶಪ್ಪನವರ್ ಉದ್ಘಾಟನೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಮಹಾಸಭಾ ರಾಜ್ಯಾಧ್ಯಕ್ಷ ಶಂಕರ್ ಬಿದರಿ ಅವರು ಮಹದೇವಿ ಅಕ್ಕ ಹಾಗೂ ಶಿವಕುಮಾರ ಸ್ವಾಮೀಜಿಗಳ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ ಎಂದು ಹೇಳಿದರು.
ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ದೀಪಿಕಾ ಕರುಣ ಮಾತನಾಡಿ, ಈ ಕಾರ್ಯಕ್ರಮದ ಪೂರ್ವಭಾವಿಯಾಗಿ, ಏಪ್ರಿಲ್ 2 ರಂದು ಗಡುಗಳಲೆ ಜಾತ್ರಾ ಮೈದಾನದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ, 3 ರಂದು, ಮಕ್ಕಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ. ಅದೇ ದಿನ ಜಾನಪದ ಕಲಾತಂಡಗಳು, ಆಕರ್ಷಕ ವೀರಗಾಸೆ ಕಲಾವಿದರ ಮೂಲಕ ಮೆರವಣಿಗೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಿವಿಧ ಮಠಾಧೀಶರು ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಹಿಳಾ ವಿಭಾಗದ ರಾಜ್ಯಾಧ್ಯಕ್ಷೆ ಮುಕ್ತಾಂಬ, ಉಪಾಧ್ಯಕ್ಷೆ ರಾಜೇಶ್ವರಿ ನಾಗರಾಜ್, ನಿರ್ದೇಶಕರಾದ ಅನುರಾಧ ಚಂದ್ರಶೇಖರ್, ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಎಚ್. ವಿ.ಶಿವಪ್ಪ, ಜಿಲ್ಲಾ ಘಟಕ, ತಾಲೂಕು ಘಟಕಗಳ ಪದಾಧಿಕಾರಿಗಳು, ಭಾಗವಹಿಸಲಿದ್ದಾರೆ.
ಜಿಲ್ಲೆಯಾದ್ಯಂತ ಇರುವ ಸಾವಿರಾರು ಸಂಖ್ಯೆಯ ವೀರಶೈವ ಲಿಂಗಾಯತ ಸಮಾಜದ ಬಾಂಧವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೋರಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಲೇಖನ ಧರ್ಮೇಂದ್ರ, ಕೋಶಾಧ್ಯಕ್ಷೆ ಮಮತಾ ರವೀಶ್, ನಿರ್ದೇಶಕರಾದ ಭಾಗಿರತಿ ಜಗದೀಶ್, ಮಮತಾ ಲಿಂಗರಾಜು, ಮತ್ತು ಜಿಲ್ಲಾ ಘಟಕದ ಸಹ ಕಾರ್ಯದರ್ಶಿ ಎಂ.ಎಸ್. ಗಣೇಶ್ ಇದ್ದರು.
Back to top button
error: Content is protected !!