ಕುಶಾಲನಗರ ಮಾ 14: ಕೊಡಗು ಜಿಲ್ಲಾ ಪಂಚಾಯತಿ ಹಾಗೂ ಕೂಡುಮಂಗಳೂರು ಗ್ರಾಮ ಪಂಚಾಯತಿಯ ವತಿಯಿಂದ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ರೂ.5.20 ವೆಚ್ಚದಲ್ಲಿ ಕೈಗೊಂಡಿರುವ ಶೌಚಾಲಯ ನಿರ್ಮಾಣ ಕಾಮಗಾರಿಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಡಿ.ಭಾಸ್ಕರ್ ನಾಯಕ್ ಗುರುವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಿ.ಭಾಸ್ಕರ್ ನಾಯಕ್,ಭಾರತ ಸರ್ಕಾರವು ಬಯಲು ಶೌಚವನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ರಾಷ್ಟ್ರವ್ಯಾಪಿ ಸ್ವಚ್ಛ ಭಾರತ್ ಮಿಷನ್ ಅನ್ನು ಪ್ರಾರಂಭಿಸುವ ಮೂಲಕ ಶೌಚಾಲಯ ನಿರ್ಮಾಣಕ್ಕೆ ಮೊದಲ ಆದ್ಯತೆ ನೀಡಿದೆ. ಮಕ್ಕಳು ಶೌಚಾಲಯವನ್ನು ಸಮರ್ಪಕವಾಗಿ ಬಳಕೆಯನ್ನು ಮಾಡಿಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದ್ದು, ಸರ್ಕಾರ ಮಕ್ಕಳ ಕಲಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ ಎಂದರು.
ಈ ಶಾಲೆಯಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲಾಗುತ್ತಿದ್ದು, ಗುಣಮಟ್ಟದ ಕಲಿಕಾ ಪ್ರಗತಿ ಇದೆ.ಈ ಶಾಲೆಗೆ ಮುಂದಿನ ದಿನಗಳಲ್ಲಿ ಸುಸಜ್ಜಿತ ಉದ್ಯಾನವನ ನಿರ್ಮಾಣ ಮಾಡುವ ಮೂಲಕ ಶಾಲೆಯನ್ನು ಆಕರ್ಷಣೀಯವಾಗಿ ಮಾಡಲಾಗುವುದು ಎಂದು ಭಾಸ್ಕರ್ ನಾಯಕ್ ತಿಳಿಸಿದರು.
ಹಳ್ಳಿಗಳಲ್ಲಿ ಆರೋಗ್ಯ ಮತ್ತು ನೈರ್ಮಲ್ಯ ಕಾಪಾಡುವ ದಿಸೆಯಲ್ಲಿ ಬಯಲು ಶೌಚಾಲಯ ಬಳಕೆಯನ್ನು ಮುಕ್ತಗೊಳಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪಣ ತೊಡಬೇಕು. ಶೌಚಗೃಹ ರಹಿತ ಕುಟುಂಬಗಳನ್ನು ಗುರುತಿಸಿ ಅಂತಹ ಕುಟುಂಬಗಳಿಗೆ ಶೌಚಾಲಯ ನಿರ್ಮಿಸಲು ನೆರವಾಗಬೇಕು ಎಂದು ಭಾಸ್ಕರ್ ನಾಯಕ್ ಎಂದರು.
ಗ್ರಾಮ ಪಂಚಾಯತಿ ಸದಸ್ಯ ಕೆ.ಕೆ.ಭೋಗಪ್ಪ ಮಾತನಾಡಿ, ಈ ಶೌಚಾಲಯ ನಿರ್ಮಾಣದಿಂದ ಮಕ್ಕಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಮಕ್ಕಳು ಸರ್ಕಾರಿ ಸೌಲಭ್ಯ ಬಳಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್,ಗ್ರಾಮ ಪಂಚಾಯತಿ ಆಡಳಿತ ಮಂಡಳಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸಹಕಾರದಿಂದ ಶಾಲೆಗೆ ಬಹಳ ಅಗತ್ಯವಾಗಿ ಬೇಕಾದ ಶೌಚಾಲಯ ನಿರ್ಮಾಣ ಆಗುತ್ತಿರುವುದು ಹೆಮ್ಮೆಯ ಸಂಗತಿ ಎಂದರು.
ವಿದ್ಯಾರ್ಥಿಗಳು ವೈಯಕ್ತಿಕ ಸ್ವಚ್ಛತೆ ಹಾಗೂ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ಗ್ರಾ.ಪಂ.ಉಪಾಧ್ಯಕ್ಷೆ ಶಶಿಕಲಾ, ಎಸ್.ಡಿ.ಎಂ.ಸಿ.ಅಧ್ಯಕ್ಷ ಎ.ಎಂ.ಜವರಯ್ಯ, ಗ್ರಾ.ಪಂ.ಪಿಡಿಓ ಎಂ.ಆರ್.ಸಂತೋಷ್, ಕಛೇರಿ ಸಿಬ್ಬಂದಿ ಅವಿನಾಶ್, ಶಾಲಾ ಶಿಕ್ಷಕರಾದ ಕೆ.ಗೋಪಾಲಕೃಷ್ಣ, ಎಂ.ಟಿ.ದಯಾನಂದ ಪ್ರಕಾಶ್, ಬಿ.ಎನ್.ಸುಜಾತ, ಬಿ.ಡಿ.ರಮ್ಯ, ಎಸ್.ಎಂ.ಗೀತಾ, ಬಿ.ಎಸ್.ಅನ್ಸಿಲಾ ರೇಖಾ, ಸಿಬ್ಬಂದಿ ಎಂ.ಉಷಾ ಮತ್ತು ವಿದ್ಯಾರ್ಥಿಗಳು ಇದ್ದರು..
Back to top button
error: Content is protected !!