ಕಾರ್ಯಕ್ರಮ

ಕುಶಾಲನಗರದಲ್ಲಿ ನಡೆದ ಗಾಂಧಿ ಸ್ಮರಣೆ ಮತ್ತು ನವಜೀವನೋತ್ಸವ ಕಾರ್ಯಕ್ರಮ

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕೊಡಗು ಜಿಲ್ಲೆ,ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸೋಮವಾರಪೇಟೆ ಹಾಗೂ ಮಡಿಕೇರಿ ತಾಲ್ಲೂಕು ಇವರ ಸಹಯೋಗದಲ್ಲಿ ನಡೆದ ಕಾರ್ಯಕ್ರಮ

ಕುಶಾಲನಗರ, ಅ 16: ಪಾನ ಮುಕ್ತ ಸಮಾಜ ನಿರ್ಮಾಣ ಮಾಡುವ ಮೂಲಕ ಆರೋಗ್ಯಕರ ಸಮಾಜ ಕಟ್ಟಲು ಜನಜಾಗೃತಿ ವೇದಿಕೆ ಮದ್ಯವರ್ಜನ ಶಿಬಿರಗಳನ್ನು ನಡೆಸುವ ಮೂಲಕ ಶ್ರಮಿಸುತ್ತಿದೆ ಎಂದು ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷ ಅಭಿಮನ್ಯುಕುಮಾರ್ ಹೇಳಿದರು.

ಕುಶಾಲನಗರ ಎಪಿಸಿಎಂಎಸ್ ಸಭಾಂಗಣದಲ್ಲಿ
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕೊಡಗು ಜಿಲ್ಲೆ,ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸೋಮವಾರಪೇಟೆ ಹಾಗೂ ಮಡಿಕೇರಿ ತಾಲ್ಲೂಕು ಇವರ ಸಹಯೋಗದಲ್ಲಿ ಗಾಂಧಿ ಜಯಂತಿ ಸಂಭ್ರಮಾಚರಣೆಯ ಅಂಗವಾಗಿ ಏರ್ಪಡಿಸಿದ್ದ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧಿ ಸ್ಮರಣೆ ಮತ್ತು ನವಜೀವನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮೀಣಾಭಿವೃದ್ಧಿಗೆ ಮದ್ಯಪಾನ ಮಾರಕವಾಗಿದೆ. ಇತ್ತೀಚಿನ ದಿನಗಳಲ್ಲಿ ಕುಡಿತದ ಚಟದಿಂದ ನೂರಾರು ಕುಟುಂಬಗಳು ಬೀದಿಪಾಲಾಗಿವೆ. ಮಕ್ಕಳು ಅನಾಥವಾಗಿವೆ ಎಂದು ಬೇಸರ ವ್ಯಕ್ತಪಡಿಸಿದರು.
ಗಾಂಧೀಜಿ ಅವರು ಮದ್ಯಮುಕ್ತ ಭಾರತ ಕನಸು ಕಂಡಿದ್ದು, ಇದನ್ನು ನನಸು ಮಾಡುವಲ್ಲಿ ನಾವು ವಿಫಲರಾಗಿದ್ದೇವೆ. ಮದ್ಯವ್ಯಸನಿಗಳು ಕುಡಿತ ತ್ಯಜಿಸಿ ಹೊಸ ಜೀವನ ಕಟ್ಟಿಕೊಂಡು ಬದುಕನ್ನು ಸಾರ್ಥಕ ಪಡಿಸಿಕೊಳ್ಳಬೇಕು ಎಂದರು.

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಬಾಪೂಜಿಯವರ ಕನಸನ್ನು ನನಸು ಮಾಡುತ್ತಿದ್ದಾರೆ.ಮದ್ಯವಸನಿಗಳನ್ನು ಪಾನ ಮುಕ್ತಗೊಳಿಸಿ ಅವರ ಸಾಮಾಜಿಕ, ಆರ್ಥಿಕ ಮತ್ತು ಕೌಟುಂಬಿಕ ಬದಲಾವಣೆಗೆ ಕಾರ್ಯ ಕ್ರಮಗಳನ್ನು ರೂಪಿಸಲಾಗಿದೆ
ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಸಕ ಡಾ.ಮಂತರ್ ಗೌಡ ಮಾತನಾಡಿ,ಕುಡಿತ ಮತ್ತು ಡ್ರಗ್ಸ್‌ಗಳಿಗೆ ಅಂಟಿ ಕೊಂಡರೆ ಹೊರಬರುವುದು ಕಷ್ಟಕರ, ಸಹವಾಸದಿಂದ ಸನ್ಯಾಸಿ ಕೆಟ್ಟ ಎನ್ನುವ ನಾಣುಡಿಯಂತೆ ಪ್ರತಿಯೊಬ್ಬರು ಸಹವಾಸ ಮಾಡುವಾಗ ನೂರು ಬಾರಿ ಯೋಚಿಸಿ ಸ್ನೇಹ ಮಾಡಬೇಕು ಎಂದರು.
ದುಶ್ಚಟಗಳು ವ್ಯಕ್ತಿಯ ಬದುಕು, ಕುಟುಂಬ ಮಾತ್ರವಲ್ಲದೆ ಸಮಾಜದ ಮೇಲೂ ನೇರ ಪರಿಣಾಮ ಬೀರುತ್ತದೆ.ಮಾದಕ ವಸ್ತು ಸೇವನೆ ವ್ಯಕ್ತಿಯ ಮೆದುಳು, ದೈಹಿಕ, ಮಾನಸಿಕ ಆರೋಗ್ಯ ಹಾಗೂ ಸಾಮಾಜಿಕ ಬದುಕಿಗೂ ಮಾರಕವಾಗಿದೆ.ಈ ಬಗ್ಗೆ ಪ್ರತಿಯೊಬ್ಬರು ಚಿಂತನೆ ಮಾಡಿ ದುಶ್ಚಟಗಳಿಂದ‌ ದೂರ ಉಳಿದು ಆರೋಗ್ಯಕರ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು.

ಸೋಮವಾರಪೇಟೆ ವಿಭಾಗದ ಉಪ ಪೊಲೀಸ್ ಅಧೀಕ್ಷಕ ಆರ್.ವಿ.ಗಂಗಾಧರಪ್ಪ ಮಾತನಾಡಿ,ಮಾದಕ ದ್ರವ್ಯಗಳನ್ನು ವಿತರಿಸುವ ಜಾಲವನ್ನೂ ಮಟ್ಟಹಾಕಲು ಕಾನೂನಿನೊಂದಿಗೆ ಸಹಕರಿಸುವುದು, ಮಾದಕ ವಸ್ತುಗಳನ್ನು ಬಳಸುತ್ತಿರುವವರಿಗೆ ಅವುಗಳ ಮಾರಕ ಪರಿಣಾಮದ ಕುರಿತು ತಿಳುವಳಿಕೆ ನೀಡಿ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರು ಮುಂದಾಗಬೇಕು ಎಂದರು.
ಈ ಸಂದರ್ಭ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ವಿ.ಪಿ.ಶಶಿಧರ್, ಅಖಿಲ ಕರ್ನಾಟಕ ಜನಜಾಗೃತಿ ಸಮಿತಿ ಮಡಿಕೇರಿ ತಾಲ್ಲೂಕು ಅಧ್ಯಕ್ಷೆ ಧೀರ್ಘಕೇಶಿ ಶಿವಣ್ಣ, ಸೋಮವಾರಪೇಟೆ ತಾಲ್ಲೂಕು ಸದಸ್ಯರಾದ ಚಂದ್ರಪ್ರಕಾಶ್,ಮಸಗೋಡು ಸುರೇಶ್ , ಜನಜಾಗೃತಿ ಸದಸ್ಯರಾದ ಎಂ.ಎನ್.ಚಂದ್ರಮೋಹನ್, ಪುಂಡರೀಕಾಕ್ಷ, ಕೆ.ಎಸ್.ರಾಜಶೇಖರ್,ಎಸ್.ಕೆ.ಸತೀಶ್,ಎಚ್.ಎಂ.ಚಂದ್ರು,ಯೋಜನೆ ಮೇಲ್ವಿಚಾರಕ ರೋಹಿತ್ ಹಾಗೂ ಕಾರ್ಯಕರ್ತೆಯರು,ಸ್ವಯಂ ಸೇವಕರು ಪಾಲ್ಗೊಂಡಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!