ಕುಶಾಲನಗರ, ಮಾ 08: ಮಹಿಳೆ ನಾಲ್ಕು ಗೋಡೆಗಳ ನಡುವೆ ಕಾಲ ಕಳೆಯುವ ಕಾಲವೀಗ ಕಣ್ಮರೆಯಾಗಿ ಪುರುಷ ಪ್ರಧಾನ ಸಮಾಜದಲ್ಲಿ ಪುರುಷನಷ್ಟೇ ಧೀಮಂತಿಕೆಯಿಂದ ಬದುಕಲು ಸಾಧ್ಯವಿದೆ ಎಂದು ಶನಿವಾರಸಂತೆ ಶ್ರೀ ವಿಘ್ನೇಶ್ವರ ಬಾಲಿಕ ಸಂಸ್ಥೆಯ ಉಪನ್ಯಾಸಕ ಜಯಕುಮಾರ್ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಇವರ ಸಹಯೋಗದಲ್ಲಿ ಕುಶಾಲನಗರದ ಎ.ಪಿ.ಸಿ.ಎಂ.ಎಸ್ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,ಪ್ರತಿಯೊಂದು ಕ್ಷೇತ್ರದಲ್ಲೂ ಹೆಣ್ಣು ತನ್ನ ಛಾಪನ್ನು ಮೂಡಿಸುತ್ತಿದ್ದಾಳೆ. ತಳಮಟ್ಟದಿಂದ ಮೇಲೆ ಬಂದು ಸಮಾಜದ ಎಲ್ಲಾ ಸ್ತರಗಳಲ್ಲಿ ಮಹಿಳೆಯರು ಬೆಳೆದಿದ್ದಾರೆ. ಮಹಿಳೆಯು ಮಾತೃ ಸ್ವರೂಪಿ, ತನ್ನ ಜೀವನದಲ್ಲಿ ಎಲ್ಲಾ ಹಂತದ ಕಷ್ಟಗಳನ್ನು ಸಹನೆಯಿಂದ ದಾಟಿಕೊಂಡು ಮುನ್ನಡೆಯುತ್ತಾಳೆ. ಈ ಹಿಂದೆ ಮಹಿಳೆಯು ಕೇವಲ ಅಡುಗೆ ಕೋಣೆಗೆ ಮಾತ್ರ ಸೀಮಿತವಾಗುತ್ತಿದ್ದಳು. ಆದರೆ ಪ್ರಸ್ತುತ ಸಮಾಜದ ಎಲ್ಲಾ ರಂಗಗಳಲ್ಲಿ ಪುರುಷನ ಸಮಾನಾಗಿ ಮಹಿಳೆಯರು ಅಭಿವೃದ್ಧಿ ಹೊಂದಿದ್ದಾರೆ ಎಂದರು.
ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಮಹಿಳೆಯರನ್ನು ಸನ್ಮಾನಿಸಿ ಮಾತನಾಡಿದ ಶಾಸಕ ಮಂತರ್ ಗೌಡ, ಮಹಿಳೆ ತ್ಯಾಗಮೂರ್ತಿ, ತನ್ನ ಬದುಕನ್ನು ಕುಟುಂಬಕ್ಕಾಗಿ ಮೀಸಲಿಡುವ ಶಕ್ತಿ, ಆಕೆಯ ಶ್ರಮ, ಅದ್ಭುತ. ಹಲವು ಜವಾಬ್ದಾರಿಯನ್ನು ನಿಭಾಯಿಸಿ ಕುಟುಂಬವನ್ನು ಮುನ್ನಡೆಸುವ ಶಕ್ತಿ ಮಹಿಳೆಗಿದೆ. ಪ್ರತಿಯೊಂದು ಮಹಿಳೆ ತನ್ನ ಜೀವನದಲ್ಲಿ ವಿವಿಧ ಹಂತಗಳನ್ನು ದಾಟುತ್ತಾ, ಆತ್ಮವಿಶ್ವಾಸ, ಪ್ರೇರಣೆ ಹಾಗೂ ಶಕ್ತಿ ಹೊಂದುವ ಪ್ರತಿರೂಪವಾಗಿರುತ್ತಾರೆ ಎಂದರು.
ಸ್ತ್ರೀ ಶಕ್ತಿ ಒಕ್ಕೂಟದ ರಾಜ್ಯಧ್ಯಕ್ಷೆ ರೆಹನಾ ಸುಲ್ತಾನ ಪ್ರಾಸ್ತಾವಿಕವಾಗಿ ಮಾತನಾಡಿ, ಮಹಿಳೆಯರು ಕುಟುಂಬ, ಸಮಾಜ, ಅಥವಾ ಯಾವುದೇ ಕ್ಷೇತ್ರದಲ್ಲೂ, ಸಮರ್ಥವಾಗಿ ನಿಭಾಯಿಸದೆ ಹಿಂದೆ ಸರಿದ ಉದಾಹರಣೆಗಳಿಲ್ಲ. ಮಹಿಳೆಗೆ ತನ್ನದೇ ಆದ ಜವಾಬ್ದಾರಿ ಇದ್ದು, ಅದನ್ನು ಯಶಸ್ವಿಯಾಗಿ ನಿಭಾಯಿಸಿಕೊಂಡು ಬರುತ್ತಿದ್ದಾಳೆ ಎಂದರು.
ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಮನೆಯ ಒಳಗೆ ಮತ್ತು ಹೊರಗೂ ತನ್ನದೇ ಆದ ಜವಾಬ್ದಾರಿಯನ್ನು ನಿಭಾಯಿಸಿಕೊಂಡು ಬರುವ ಮಹಿಳೆಯರ ಕಾರ್ಯ ನಿಜಕ್ಕೂ ಶ್ಲಾಘನೀಯ. ಮಹಿಳೆಯರು ಧೈರ್ಯದಿಂದ ಜಗತ್ತನ್ನೇ ತಲುಪಬಲ್ಲ ಶಕ್ತಿ ಹೊಂದಿದ್ದಾರೆ ಎಂದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ ಮಾತನಾಡಿ, ಮಹಿಳೆಯರು ಒಂದು ಕುಟುಂಬದ ಆಧಾರ ಸ್ತಂಭವಾಗಿ, ಆರ್ಥಿಕವಾಗಿ, ರಾಜಕೀಯವಾಗಿ, ಸಾಂಸ್ಕೃತಿಕವಾಗಿ ಹೀಗೆ ಹಲವಾರು ಕ್ಷೇತ್ರಗಳಲ್ಲಿ ಬೆಳೆಯಲು ಪ್ರತಿಯೊಬ್ಬರೂ ಅವಕಾಶವನ್ನು ಕಲ್ಪಿಸಬೇಕು ಮತ್ತು ಪ್ರತಿಯೊಬ್ಬರೂ ಕೂಡ ಪ್ರೋತ್ಸಾಹಿಸಬೇಕು ಎಂದರು.
ಸ್ತ್ರೀ ಶಕ್ತಿ ಒಕ್ಕೂಟದ ಸೋಮವಾರಪೇಟೆ ತಾಲೂಕು ಅಧ್ಯಕ್ಷೆ ಹೇಮಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ನಂತರ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ಶಿಶು ಅಭಿವೃದ್ಧಿ ಇಲಾಖೆಯ ಯೋಜನಾಧಿಕಾರಿ, ಶ್ರೀದೇವಿ, ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರು,
ಆರೋಗ್ಯ ಇಲಾಖೆಯ ಜಿಲ್ಲಾ ಶಿಕ್ಷಣಾಧಿಕಾರಿ ಶಾಂತಿ, ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ರುಕ್ಮಿಣಿ, ಸೇರಿದಂತೆ ಮತ್ತಿತರರು ಹಾಜರಿದ್ದರು.
Back to top button
error: Content is protected !!