ಕಾರ್ಯಕ್ರಮ

ಕುಶಾಲನಗರ ತಹಸೀಲ್ದಾರ್ ಕಛೇರಿಯಲ್ಲಿ ಸ್ಕೌಟ್ಸ್, ಗೈಡ್ಸ್ ಸಂಸ್ಥೆ ವತಿಯಿಂದ ಧ್ವಜ ದಿನಾಚರಣೆ

ಕುಶಾಲನಗರ, ನ.7: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಧ್ವಜ ದಿನಾಚರಣೆ ಹಾಗೂ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ,ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕುಶಾಲನಗರ ತಾಲ್ಲೂಕು ಸ್ಥಳೀಯ ಸಂಸ್ಥೆಯ ವತಿಯಿಂದ ಕುಶಾಲನಗರ ತಹಸೀಲ್ದಾರ್ ಆವರಣದಲ್ಲಿ
ಏರ್ಪಡಿಸಿದ್ದ ಸರಳ ಕಾರ್ಯಕ್ರಮದಲ್ಲಿ ಧ್ವಜ ದಿನಾಚರಣೆಯ
ಧ್ವಜ ಚೀಟಿಯನ್ನು ಕುಶಾಲನಗರ ತಹಸೀಲ್ದಾರ್ ಕಿರಣ್ ಗೌರಯ್ಯ ಬಿಡುಗಡೆ ಮಾಡಿದರು.

ಧ್ವಜ ಚೀಟಿಯನ್ನು ಬಿಡುಗಡೆಗೊಳಿಸಿದ ತಹಶೀಲ್ದಾರ್ ಕಿರಣ್ ಗೌರಯ್ಯ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು
ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಹಾಗೂ ದೇಶದ ಕುರಿತಾದ ಕರ್ತವ್ಯಗಳನ್ನು ತಿಳಿಹೇಳುವ ಮತ್ತು ಶಿಸ್ತು ಮೂಡಿಸಿ ಸೇವಾ ಮನೋಭಾವನೆ ಬೆಳೆಸುವ ಸಂಸ್ಥೆಯ ಕಾರ್ಯ ಮಾದರಿಯಾಗಿದೆ’ ಎಂದು ಹೇಳಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತಮ್ಮ 74 ನೇ ಸಂಸ್ಥಾಪನಾ ದಿನವನ್ನು ಅತ್ಯಂತ ಉತ್ಸಾಹದಿಂದ ಆಚರಿಸಿದಾಗ ಸೌಹಾರ್ದತೆಯ ಮನೋಭಾವ ಮತ್ತು ಶ್ರೇಷ್ಠತೆಯ ಅನ್ವೇಷಣೆ ಸಾಧ್ಯ.ಇಂತಹ ಚಟುವಟಿಕೆಗಳು ಮತ್ತಷ್ಟು ವಿಸ್ತರಣೆಗೊಳ್ಳುವ ಮೂಲಕ ಸಮಾಜದಲ್ಲಿ ಸಾಮಾಜಿಕ‌ ಕ್ರಾಂತಿ ಸಾಧ್ಯ ಎಂದರು.

ಧ್ವಜ ದಿನಾಚರಣೆಯ ಮಹತ್ವ ಕುರಿತು ಮಾಹಿತಿ ನೀಡಿದ
ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕುಶಾಲನಗರ ತಾಲ್ಲೂಕು ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ ಪ್ರವೀಣ್ ದೇವರಗುಂಡ ಸೋಮಪ್ಪ ಮಾತನಾಡಿ, ವಿಶ್ವಾದ್ಯಂತ ಸ್ಥಾಪನೆಗೊಂಡು ಸಾಮಾಜಿಕ ಚಳವಳಿಯಲ್ಲಿ ತೊಡಗಿರುವ
ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ವಿದ್ಯಾರ್ಥಿಗಳು ಹಾಗೂ ಯುವ ಸಮುದಾಯದಲ್ಲಿ ಶಿಸ್ತು- ಸಂಯಮ ಹಾಗೂ ಉತ್ತಮ ನಾಯಕತ್ವ ಗುಣಗಳನ್ನು ಬೆಳೆಸುವ ಮೂಲಕ ದೇಶದ ಪ್ರಗತಿಗೆ ಪ್ರತಿಯೊಬ್ಬರೂ ಸಂಕಲ್ಪ ಹೊಂದಬೇಕೆಂಬ ಸದಾಶಯಗಳನ್ನು ಹೊಂದಿದೆ ಎಂದರು.
ದೇಶದಲ್ಲಿ 1950 ರಲ್ಲಿ ಅಂದಿನ ಪ್ರಧಾನಿಯಾಗಿದ್ದ ಪಂಡಿತ್ ಜವಾಹರಲಾಲ್ ನೆಹರೂ ಅವರು ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಗಳನ್ನು ಒಟ್ಟುಗೂಡಿಸಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಎಂದು ಸ್ಥಾಪಿಸಿದ ನೆನಪಿಗಾಗಿ ಪ್ರತಿ ವರ್ಷ ನವೆಂಬರ್ 1 ರಂದು ರಾಷ್ಟ್ರದಾದ್ಯಂತ ಧ್ವಜ ದಿನ ಮತ್ತು ಸಂಸ್ಥಾಪನಾ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ ಎಂದರು.
ಧ್ವಜ ದಿನಾಚರಣೆಯ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಸಂಸ್ಥೆಯ ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿ ಟಿ.ಜಿ.ಪ್ರೇಮಕುಮಾರ್, ಭಾತೃತ್ವ ಹಾಗೂ ಭಾವೈಕ್ಯತೆಯ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು.
ಶಿರಸ್ತೇದಾರ್ ಬಿ.ಪಿ.ಅನಿತ, ಕಂದಾಯಾಧಿಕಾರಿ ಸಂತೋಷ್, ಸ್ಕೌಟ್ಸ್, ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷರಾದ
ಕೆ.ವಿ.ಅರುಣ್,
ಕೆ.ಪಿ.ರಾಜು, ಕಾರ್ಯದರ್ಶಿ ಎಂಎಸ್.ಗಣೇಶ್ , ಸಹ ಕಾರ್ಯದರ್ಶಿ ಎಸ್.ಆರ್.ಶಿವಲಿಂಗ,
ಹಾಗೂ ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗೈಡ್ಸ್ ನ ವಿದ್ಯಾರ್ಥಿಗಳು, ಕಂದಾಯ ಇಲಾಖೆಯ ಸಿಬ್ಬಂದಿ ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!