ಕುಶಾಲನಗರ,ಏ 16:ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀಗೆಹೊಸೂರು, ಜೇನುಕಲ್ಲು ಬೆಟ್ಟ, ಚಿನ್ನೇನಹಳ್ಳಿ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಅರಣ್ಯಾಧಿಕಾರಿಗಳು ಮತ್ತು ರೈತರ ಸಭೆ ಜೇನುಕಲ್ಲು ಬೆಟ್ಟದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆಯಿತು.
ನಾಲ್ಕು ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರೊಂದಿಗೆ ಹಾಗೂ ಅರಣ್ಯ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಪರಿಹಾರೋಪಾಯಗಳ ಬಗ್ಗೆ ಶಾಸಕರು ಚರ್ಚಿಸಿದರು.
ಸಭೆಯಲ್ಲಿ ಹಾಜರಿದ್ದ ರೈತರು ತಮ್ಮ ವ್ಯಾಪ್ತಿಯಲ್ಲಿನ ರಸ್ತೆ, ಕುಡಿಯುವ ನೀರು, ಜಮೀನು ಹಕ್ಕು ಪತ್ರ, ಕಾಡಾನೆಗಳ ಹಾವಳಿ, ನಿವೇಶನ ರಹಿತರಿಗೆ ನಿವೇಶನಕ್ಕೆ ಜಾಗವನ್ನು ಗುರುತಿಸುವುದು ಸೇರಿದಂತೆ ಗ್ರಾಮ ವ್ಯಾಪ್ತಿಯ ಸಮಸ್ಯೆಗಳ ಬಗ್ಗೆ ಶಾಸಕರ ಗಮನಕ್ಕೆ ತಂದರು.
ಈ ಸಂದರ್ಭ ಮಾತನಾಡಿದ ಶಾಸಕ ಡಾ. ಮಂತರ್ ಗೌಡ, ಈಗಾಗಲೇ ಅರಣ್ಯ ಇಲಾಖೆಯ ವತಿಯಿಂದ ಕಾಡಾನೆಗಳ ಹಾವಳಿ ತಪ್ಪಿಸಲು ನೂತನ ತಂತ್ರಜ್ಞಾನದ ಸೋಲಾರ್ ಲೈನ್ ಅಳವಡಿಕೆ ಮಾಡಲಾಗುತ್ತದೆ. ಮುಂದಿನ ದಿನಗಳಲ್ಲಿ ಈ ವ್ಯಾಪ್ತಿಯಲ್ಲಿ 9 ಕಿಲೋಮೀಟರ್ ವರೆಗೆ ರೈಲ್ವೆ ಕಂಬಿಗಳನ್ನು ಅಳವಡಿಕೆ ಮಾಡಲು ಪ್ರಸ್ತಾವನೆಯನ್ನು ಕಳುಹಿಸಲು ಇಲಾಖೆಗೆ ಸೂಚನೆ ನೀಡಲಾಗಿದೆ. ಅದರಂತೆಯೇ ಜೇನುಕಲ್ಲು, ಸೀಗೆಹೊಸೂರು ಭುವನಗಿರಿ, ಚಿನ್ನೇನಹಳ್ಳಿ ಕಾಡಾಂಚಿನ ಗ್ರಾಮಗಳ ಅಭಿವೃದ್ಧಿ ಪೂರಕವಾದ ಯೋಜನೆಗಳನ್ನು ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ತಿಳಿಸಿದರು.
ಈ ಸಂದರ್ಭ ಕುಶಾಲನಗರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಎ.ಸಿ.ಎಫ್. ಗೋಪಾಲ್, ಸೋಮವಾರಪೇಟೆ ವಲಯ ಅರಣ್ಯಾಧಿಕಾರಿ ಶೈಲೇಂದ್ರ, ಹೆಬ್ಬಾಲೆ ಉಪ ವಲಯ ಅರಣ್ಯಾಧಿಕಾರಿ ಭರತ್, ಗ್ರಾಮ ಪಂಚಾಯಿತಿ ಸದಸ್ಯರಾದ ಟಿ.ಪಿ. ಹಮೀದ್, ಅರುಣ್ ರಾವ್, ಅನಂತ್, ಶಿವಕುಮಾರ್, ಚಂದ್ರು, ಜಯಶೀಲಾ, ರೈತ ಹೋರಾಟ ಸಮಿತಿ ಅಧ್ಯಕ್ಷ ಅಪ್ಪಾಜಿಗೌಡ ಸೇರಿದಂತೆ ಗ್ರಾಮದ ಪ್ರಮುಖರು, ರೈತರು ಹಾಜರಿದ್ದರು.
Back to top button
error: Content is protected !!