ಕುಶಾಲನಗರ, ಜೂ 20: ಕುಶಾಲನಗರ ಪುರಸಭಾ ವ್ಯಾಪ್ತಿಯ ಬೈಚನಹಳ್ಳಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ರೂ 2 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಕುಶಾಲನಗರ ತಾಲೂಕು ಮಟ್ಟದ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶಾಸಕ ಡಾ.ಮಂತರ್ ಗೌಡ ಭೂಮಿಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಸದಾ ಸ್ಮರಿಸುವ ಕಾರ್ಯ ಆಗಬೇಕಿದೆ. ಅವರ ಧ್ಯೇಯ, ಉದ್ದೇಶ ಈಡೇರಿಕೆಗೆ ಎಲ್ಲರೂ ಒಗ್ಗೂಡಿ ಕಾರ್ಯನಿರ್ವಹಿಸುವಂತಾಗಬೇಕಿದೆ. 50 ಸೆಂಟ್ ಜಾಗದಲ್ಲಿ ನಿರ್ಮಾಣವಾಗುವ ನೂತನ ಭವನ ಆಕರ್ಷಣೀಯವಾಗಿಸುವ ನಿಟ್ಟಿನಲ್ಲಿ ಹೆಚ್ಚುವರಿ ಅನುದಾನ ಒದಗಿಸಲಾಗುವುದು ಎಂದರು.
ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ,ತಾಲೂಕು ಕೇಂದ್ರಕ್ಕೆ ಬೇಕಿರುವ ಅಗತ್ಯ ಕಾಮಗಾರಿಗಳನ್ನು ಮಂಜೂರು ಮಾಡಿಸುವಲ್ಲಿ ಶಾಸಕರ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ ಎಂದರು. ಹಲವು ಸಮಾಜಮುಖಿ ಚಟುವಟಿಕೆಗಳಿಗೆ ಈ ಭವನ ಬಳಕೆಯಾಗುವಂತಾಗಲಿ ಎಂದು ಆಶಿಸಿದರು.
ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರ, ಸದಸ್ಯ ಜೈವರ್ಧನ್, ಮಾಜಿ ಸದಸ್ಯ ಹೆಚ್.ಡಿ.ಚಂದ್ರು ಮಾತನಾಡಿದರು. ಈ ಸಂದರ್ಭ ಪುರಸಭೆ ಉಪಾಧ್ಯಕ್ಷೆ ಪುಟ್ಟಲಕ್ಷ್ಮಿ, ಜಿಪಂ ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ, ಕುಡಾ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಮಾಜಿ ಅಧ್ಯಕ್ಷ ಮಂಜುನಾಥ್ ಗುಂಡುರಾವ್, ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ತಹಸೀಲ್ದಾರ್ ಕಿರಣ್ ಗೌರಯ್ಯ, ತಾಪಂ ಇಒ ಪರಮೇಶ್ವರ್, ಪುರಸಭೆ ಮುಖ್ಯಾಧಿಕಾರಿ ಗಿರೀಶ್ ಸೇರಿದಂತೆ ಪುರಸಭೆ ಸದಸ್ಯರುಗಳು, ದಲಿತ ಸಂಘಟನೆಗಳ ಮುಖಂಡರು, ಪಕ್ಷದ ಪ್ರಮುಖರು ಇದ್ದರು.
Back to top button
error: Content is protected !!