ಸುದ್ದಿಗೋಷ್ಠಿ

ಡಾ. ಮಂತರ್ ಗೌಡ ಅವರಿಗೆ ಸಚಿವ ಸ್ಥಾನ ನೀಡಲು ತೊರೆನೂರು ವಲಯ ಕಾಂಗ್ರೆಸ್ ಮುಖಂಡರ ಒತ್ತಾಯ

ಕುಶಾಲನಗರ, ಜೂ 08: ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ ಅವರು ಮಡಿಕೇರಿ ಕ್ಷೇತ್ರಕ್ಕೆ ಸಾಕಷ್ಟು ಅನುದಾನವನ್ನು ತಂದು ಉತ್ತಮ ಅಭಿವೃದ್ಧಿ ಕಾರ್ಯ ನಡೆಸುತ್ತಿದ್ದಾರೆ. ಕ್ಷೇತ್ರ ಮತ್ತಷ್ಟು ಅಭಿವೃದ್ಧಿ ದೃಷ್ಠಿಯಿಂದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟದ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ನೀಡಬೇಕೆಂದು ತೊರೆನೂರು ವಲಯ ಕಾಂಗ್ರೆಸ್ ಮುಖಂಡರ‌ ಅಭಿಪ್ರಾಯವಾಗಿದೆ ಎಂದು ಕಾಂಗ್ರೆಸ್ ಮುಖಂಡ, ತೊರೆನೂರು ಸಹಕಾರ ಸಂಘದ ನಿರ್ದೇಶಕ ಕೆ.ಎಸ್. ಕೃಷ್ಣೇಗೌಡ‌ ತಿಳಿಸಿದರು.

ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 2023 ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಪ್ರಬಲ ಅಭ್ಯರ್ಥಿಯನ್ನು ಸೋಲಿಸಿ ಶಾಸಕರಾಗಿದ್ದಾರೆ. ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದಲ್ಲಿ ಕ್ಷೇತ್ರಕ್ಕೆ ಸಾಕಷ್ಟು ಅನುದಾನವನ್ನು ತಂದು ಜನಾನುರಾಗಿ ಹಾಗೂ ಅತ್ಯಂತ ಕ್ರಿಯಾಶೀಲವಾಗಿ ಯಾವುದೇ ಕಪ್ಪು ಚುಕ್ಕಿ ಬಾರದಂತೆ ಕಾರ್ಯನಿರ್ವಹಿಸುತ್ತಿರುವ ಶಾಸಕ ಡಾ. ಮಂತರ್ ಗೌಡ ಅವರಿಗೆ ಕೊಡಗು ಜಿಲ್ಲೆಯ ಮಂತ್ರಿಯಾಗಿ ಪ್ರತಿನಿಧಿಸಲು ಅವಕಾಶ ಮಾಡಿಕೊಡಬೇಕೆಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ಅವರನ್ನು ಈ ಮೂಲಕ ಒತ್ತಾಯಿಸುತ್ತಿದ್ದೇವೆ ಎಂದರು.

ಮತ್ತೊಬ್ಬ ಕಾಂಗ್ರೆಸ್ ಮುಖಂಡ ಲೋಕೇಶ್ ಟಿ.ಜಿ. ಮಾತನಾಡಿ, ಯುವ ಶಾಸಕರಾಗಿರುವ ಮಂತರ್ ಗೌಡ ಅವರು ಉತ್ತಮ ಸಂಘಟಕರಾಗಿದ್ದಾರೆ. ಕ್ಷೇತ್ರದ ಉದ್ದಗಲಕ್ಕೂ ಓಡಾಡಿ ಉತ್ತಮ ಕೆಲಸಗಳನ್ನು ಮಾಡುವ‌ ಮೂಲಕ ವಿರೋಧ ಪಕ್ಷದ ಕಾರ್ಯಕರ್ತರು ಕೂಡ ಮೆಚ್ಚುವಂತಹ ಸೇವೆ ಸಲ್ಲಿಸುತ್ತಿರುವ ಶಾಸಕ ಮಂತರ್ ಗೌಡ ಅವರಿಗೆ ಮಂತ್ರಿ ಸ್ಥಾನ ಸಿಗಲೇಬೇಕು ಎಂದು ಒತ್ತಾಯಿಸಿದರು.

ತಾಲೂಕು ಪಂಚಾಯಿತಿಯ ಮಾಜಿ ಉಪಾಧ್ಯಕ್ಷ, ಕಾಂಗ್ರೆಸ್ ಮುಖಂಡ ಟಿ.ಕೆ. ಪಾಂಡುರಂಗ ಮಾತನಾಡಿ, ಈಗಾಗಲೆ ಸಾಕಷ್ಟು ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಒದಗಿಸಿಕೊಟ್ಟಿರುವ ಶಾಸಕರಿಗೆ ಮಂತ್ರಿ ಸ್ಥಾನ ದೊರೆತಲ್ಲಿ‌ ಕೊಡಗಿನ‌ಲ್ಲಿ ಭವಿಸುವ ಮಳೆ ಹಾನಿಗಳಿಗೆ, ಪ್ರಾಕೃತಿಕ ವಿಕೋಪದಂತಹ ಅನಾಹುತಗಳಿಗೆ ಶೀಘ್ರವಾಗಿ ಸ್ಪಂದಿಸಿ ಸಮಸ್ಯೆ ಪರಿಹಾರಕ್ಕೆ ಸಹಕಾರಿಯಾಗಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಮೂರ್ತಿ ಎಚ್ ಸಿ, ಮೋಹನ್ ಕುಮಾರ್, ರವಿಚಂದ್ರ ಟಿ.ಎ ಸಂಜೀವ್ ಮೂರ್ತಿ ಟಿ.ಜಿ ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!