ಕುಶಾಲನಗರ, ನ 25:
ಆರಾಧನೆಯ ಮೂಲಕ ನದಿ ಪ್ರಕೃತಿಯ ಸಂರಕ್ಷಣೆ ಮಾಡಲು ಸಾಧ್ಯ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೋಮವಾರಪೇಟೆ ತಾಲೂಕು ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅವರು ಕುಶಾಲನಗರದಲ್ಲಿ ಕಾವೇರಿ ಮಹಾ ಆರತಿ ಬಳಗ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಹಯೋಗದೊಂದಿಗೆ ಹುಣ್ಣಿಮೆ ಅಂಗವಾಗಿ ಕುಶಾಲನಗರದಲ್ಲಿ ನಡೆದ 192ನೇ ಕಾವೇರಿ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಪ್ರಕೃತಿ ಮಡಿಲಲ್ಲಿ ಸ್ವಚ್ಛವಾಗಿ ಹರಿಯುತ್ತಿರುವ ಕಾವೇರಿ ನದಿಯ ನೀರನ್ನು ಯಾವುದೇ ಸಂದರ್ಭ ಕಲುಷಿತವಾಗದಂತೆ ಜಾಗೃತಿ ವಹಿಸುವುದು ಪ್ರತಿಯೊಬ್ಬರ ಆಧ್ಯ ಕರ್ತವ್ಯವಾಗಿದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕಾವೇರಿ ನದಿ ಸ್ವಚ್ಛತಾ ಆಂದೋಲನ ರಾಜ್ಯ ಸಂಚಾಲಕ ಎಂ ಎನ್ ಚಂದ್ರಮೋಹನ್ ನದಿ ಸ್ವಚ್ಛತೆ ಸಂಬಂಧ ಕಳೆದ ಎರಡು ದಶಕಗಳಿಂದ ನಿರಂತರವಾಗಿ ಕಾರ್ಯಕ್ರಮಗಳ ಮೂಲಕ ಜನರಿಗೆ ಅರಿವು ಜಾಗೃತಿ ಮೂಡಿಸಲಾಗುತ್ತಿದೆ. ಸರಕಾರದ ಮೂಲಕ ನದಿ ಜಲ ಮೂಲಗಳ ಸಂರಕ್ಷಣೆಗೆ ಯೋಜನೆಗಳನ್ನು ರೂಪಿಸಬೇಕಾಗಿದೆ ಎಂದು ಹೇಳಿದರು. ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಮತ್ತು ಅಖಿಲ ಭಾರತ ಸನ್ಯಾಸಿಗಳ ಸಂಘದ ಆಶ್ರಯದಲ್ಲಿ ಒಂದು ತಿಂಗಳ ಕಾಲ ನಡೆದ ಕಾವೇರಿ ನದಿ ಜಾಗೃತಿ ರಥಯಾತ್ರೆ ಕಾರ್ಯಕ್ರಮದ ಯಶಸ್ವಿಗೆ ಕೈಜೋಡಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ಆರತಿ ಕಾರ್ಯಕ್ರಮದ ಅಂಗವಾಗಿ ಅರ್ಚಕರಾದ ಕೃಷ್ಣಮೂರ್ತಿ ಭಟ್ ಅವರು ಕುಂಕುಮಾರ್ಚನೆ ಅಷ್ಟೋತ್ತರ ನಂತರ ನದಿಗೆ ಮಹಾ ಆರತಿ ಬೆಳಗಿದರು.
ಇದೇ ವೇಳೆ ಕುಶಾಲನಗರ ಪುರಸಭೆಯ ಸ್ವಚ್ಛತಾ ಕಾರ್ಮಿಕರಾದ ಕುಮಾರ್ ಅವರನ್ನು ಬಳಗದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕುಶಾಲನಗರ ಮೇಲ್ವಿಚಾರಕರಾದ ಸುಧೀರ್, ಕಾವೇರಿ ಆರತಿ ಬಳಗದ ಸಂಚಾಲಕಿ ವನಿತಾ ಚಂದ್ರಮೋಹನ್, ಪ್ರಮುಖರಾದ ಮಂಡೆಪಂಡ ಬೋಸ್ ಮೊಣ್ಣಪ್ಪ, ಧರಣಿ, ಕರುಂಬಯ್ಯ, ಕ್ಷೇತ್ರ ಯೋಜನೆಯ ಸೇವಾ ಪ್ರತಿನಿಧಿಗಳು, ಶೌರ್ಯ ತಂಡ ಮತ್ತು ಬಳಗದ ಸದಸ್ಯರು ಇದ್ದರು.
Back to top button
error: Content is protected !!