ಕಾರ್ಯಕ್ರಮ
ನಂಜರಾಯಪಟ್ಟಣ ಪ್ರೌಢಶಾಲೆಯ ಆವರಣದಲ್ಲಿ ಎನ್ನೆಸ್ಸೆಸ್ ಶಿಬಿರಕ್ಕೆ ಚಾಲನೆ
ಕುಶಾಲನಗರ, ಮಾ 23: ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಹಾಗೂ ಗ್ರಾಮೀಣ ಜನರ ಬದುಕು ಬವಣೆ ಅರಿಯಲು ಸಹಕಾರಿ ಎಂದು ಕೊಡಗು ಜಿಲ್ಲಾ ಪಂಚಾಯಿತಿ ಶಿಕ್ಷಣ ಹಾಗು ಆರೋಗ್ಯ ಸ್ಥಾಯಿ ಸಮಿತಿಯ ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್ ಹೇಳಿದರು.
ಕುಶಾಲನಗರದ ಮಹಾತ್ಮ ಗಾಂಧಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ವತಿಯಿಂದ ತಾಲ್ಲೂಕಿನ ನಂಜರಾಯಪಟ್ಟಣ ಪ್ರೌಢಶಾಲೆಯ ಆವರಣದಲ್ಲಿ ಹತ್ತು ದಿನಗಳ ಕಾಲ ಹಮ್ಮಿಕೊಂಡಿರುವ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಬೆಳೆಸಿಕೊಳ್ಳುವುದು ಸೇರಿದಂತೆ ಸಾಮಾಜಿಕವಾಗಿ ಅಭಿವೃದ್ದಿ ಹೊಂದಲು ಇಂತಹ ಶಿಬಿರಗಳು ಉಪಕಾರಿ ಎಂದು ಭಾರತೀಶ್ ಹೇಳಿದರು.
ಕುಶಾಲನಗರದ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ಎನ್.ಎನ್.ಶಂಭುಲಿಂಗಪ್ಪ ಮಾತನಾಡಿ, ಶಿಬಿರದಲ್ಲಿ ಪಾಲ್ಗೊಳ್ಳುವ ವಿವಿಧ ಸಂಪನ್ಮೂಲ ವ್ಯಕ್ತಿಗಳು ನೀಡುವ ಉಪನ್ಯಾಸಗಳನ್ನು ವಿದ್ಯಾರ್ಥಿಗಳು ಅರ್ಥೈಸಿಕೊಂಡು ಹೆಚ್ಚಿನ ಜ್ಞಾನ ಸಂಪಾದನೆಯ ಮೂಲಕ ಶಿಬಿರದ ಪ್ರಯೋಜನಗಳನ್ನು ಪಡೆಯಬೇಕೆಂದು ಕಿವಿಮಾತು ಹೇಳಿದರು.
ಮಹಾತ್ಮ ಗಾಂಧಿ ಪದವಿ ಕಾಲೇಜಿನ ಪ್ರಾಂಶುಪಾಲೆ ಟಿ.ಎ. ಲಿಖಿತ,
ವಿವೇಕಾನಂದ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲೆ ಕ್ಲಾರಾ ರೇಶ್ಮಾ, ಡಾ.ಗಾಯಿತ್ರಿ, ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಕೆ.ಅರ್.ಮಂಜೇಶ್, ನಂಜರಾಯಪಟ್ಟಣ ವಿದ್ಯಾಸಂಘದ ಅಧ್ಯಕ್ಷ ಎಂ.ಎಂ.ಯತೀಶ್, ನಂಜರಾಯಪಟ್ಟಣ ಸಹಕಾರ ಸಂಘದ ಅಧ್ಯಕ್ಷ ಬಿ.ಸಿ.ಮಾದಯ್ಯ, ನಂಜರಾಯಪಟ್ಟಣ ಪ್ರೌಢಶಾಲೆ ಮುಖ್ಯ ಶಿಕ್ಷಕ ಹೆಚ್.ಬಿ.ಮೂರ್ತಿ ಇದ್ದರು.