ಟ್ರೆಂಡಿಂಗ್

ಡಿ.12 ರಂದು ಹೆಬ್ಬಾಲೆ ಗ್ರಾಮ ದೇವತೆ ಶ್ರೀ ಬನಶಂಕರಿ ಅಮ್ಮನವರ ವಾರ್ಷಿಕ ಹಬ್ಬ

ಕುಶಾಲನಗರ, ಡಿ 11 : ತಾಲ್ಲೂಕಿನ ಹೆಬ್ಬಾಲೆ ಗ್ರಾಮದ ಐತಿಹಾಸಿಕ ಹಿನ್ನೆಲೆ ಹೊಂದಿರುವ ಗ್ರಾಮ ದೇವತೆ ಶ್ರೀ ಬನಶಂಕರಿ ಅಮ್ಮನವರ ವಾರ್ಷಿಕ ಉತ್ಸವ ಡಿ.12 ರಂದು ಮಂಗಳವಾರ ವಿಜೃಂಭಣೆಯಿಂದ ನಡೆಯಲಿದೆ.

ಶ್ರೀ ಬನಶಂಕರಿ ಅಮ್ಮನವರ ದೇವಸ್ಥಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನ ಹಾಗೂ ಶ್ರೀ ರಾಮಲಿಂಗೇಶ್ವರ ದೇವಸ್ಥಾನ ಸಮಿತಿ ಹಾಗೂ ಗ್ರಾಮಸ್ಥರ ವತಿಯಿಂದ ಕಾರ್ತಿಕ ಮಾಸ ಕೃಷ್ಣ ಪಕ್ಷ ಅಮಾವಾಸೆಯಂದು ಮಂಗಳವಾರ ರಾತ್ರಿ ಶಕ್ತಿ ಸ್ವರೂಪಿಣಿ ಬನಶಂಕರಿ ದೇವಿಗೆ ವಿಶೇಷ ಪೂಜೆ ನೆರವೇರಲಿದೆ.

ಪ್ರತಿವರ್ಷದಂತೆ ಅಮ್ಮನವರ ಸನ್ನಿಧಿಯಲ್ಲಿ ಬೆಳಿಗ್ಗೆ 7 ಘಂಟೆಗೆ ಗಣಪತಿ ಪೂಜೆ,ಪುಣಾಹಃ ರಕ್ಷಾಬಂಧನ ಧ್ವಜಾರೋಹಣ ನವಗ್ರಹ ಸ್ಥಾಪನೆ, ನವಗ್ರಹ ಪೂಜೆ ಮಹಾ ಮಂಗಳಾರತಿ ಸೇರಿದಂತೆ ಇನ್ನಿತರ ಪೂಜಾ ಕೈಂಕರ್ಯಗಳು ದೇವಾಲಯದ ಪ್ರಧಾನ ಅರ್ಚಕ ಕೃಷ್ಣಮೂರ್ತಿ ನೇತೃತ್ವದಲ್ಲಿ ನಡೆಯಲಿವೆ.

ಗ್ರಾಮದಲ್ಲಿ ದೇವಿಯ ವಾರ್ಷಿ ಕ ಹಬ್ಬದ ಅಂಗವಾಗಿ ಪವಿತ್ರ ಬನದಲ್ಲಿರುವ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಬೆಳಿಗ್ಗೆ ಕಳಶ ಸ್ಥಾಪಿಸುವುದರೊಂದಿಗೆ ವಿವಿಧ ಕಾರ್ಯಗಳು ದೇವಸ್ಥಾನ ಸಮಿತಿ ಅಧ್ಯಕ್ಷ ಯಜಮಾನ್ ಎಚ್.ಎನ್.ಬಸವರಾಜು ಹಾಗೂ ಎಚ್.ಪಿ.ರಾಜಪ್ಪ ಹಾಗೂ ಸಮಿತಿ ಪದಾಧಿಕಾರಿಗಳು, ಸದಸ್ಯರ ನೇತೃತ್ವದಲ್ಲಿ ನಡೆಯಲಿವೆ.

ಸಂಜೆ 4 ಗಂಟೆಗೆ ಕ್ಷೀರಾಭಿಷೇಕ, ಗಣಪತಿ ಪೂಜೆ ನಂತರ ದೇವಿಯನ್ನು ಅಲಂಕರಿಸಲಾಗುತ್ತದೆ. ರಾತ್ರಿ 8 ಗಂಟೆಗೆ ಬನದಲ್ಲಿ ಅಗ್ನಿಕುಂಡ ಸ್ಥಾಪಿಸಲಾಗುತ್ತದೆ. ಹರಕೆ ಹೊತ್ತ ಭಕ್ತಾದಿಗಳು ಅಗ್ನಿಕುಂಡ ತುಳಿದು ದೇವಿ ದರ್ಶನ ಪಡೆದು ಪೂಜೆ ಸಲ್ಲಿಸುತ್ತಾರೆ. ಹಬ್ಬದ ಅಂಗವಗಿ ಗ್ರಾಮವನ್ನು ಹಸಿರು ತಳಿರು ತೋರಣಗಳಿಂದ ಹಾಗೂ ದೇವಸ್ಥಾನಗಳನ್ನು ವಿದ್ಯುತ್ ದೀಪಗಳಿಂದ ಸಿಂಗರಿಸಲಾಗುತ್ತದೆ. ರಾತ್ರಿ 10.30 ಗಂಟೆ ವೇಳೆಗೆ ಗ್ರಾಮದ ಶ್ರೀ ಬಸವೇಶ್ವರ ದೇವಾಲಯದ ಬಳಿಯಿಂದ ವಿದ್ಯುತ್ ಅಲಂಕೃತ ಮಂಟಪದಲ್ಲಿ ಬನಶಶಂಕರಿ ದೇವಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿ ನಂತರ ಉತ್ಸವವನ್ನು ನೆರವಣಿಗೆ ಮೂಲಕ ಪವಿತ್ರ ಬನಕ್ಕೆ ಕೊಂಡೊಯ್ಯಲಾಗುತ್ತದೆ.

ಇಷ್ಟಾರ್ಥ ನೆರವೇರಿಸು ತಾಯೇ ಎಂದು 9 ದಿವಸ ಉಪವಾಸ ವ್ರತ ಆಚರಿಸಿ ಅಂದು ಉತ್ಸವಗಳೊಂದಿಗೆ ಮೆರವಣಿಗೆಯಲ್ಲಿ ತಾಯಿಯ ಬನಕ್ಕೆ ಆಗಮಿಸುವ ಭಕ್ತರು ಅಗ್ನಿಕುಂಡ ತುಳಿದು ದೇವಿಗೆ ಹಣ್ಣತುಪ್ಪ ಅಭಿಷೇಕ ಮಾಡಿ ಆರ್ಶೀವಾದವನ್ನು ಪಡೆದು ದೇವಿಗೆ ಕೃಪೆಗೆ ಪಾತ್ರರಾಗುತ್ತಾರೆ. ದೇವಿಯ ಉತ್ಸವದೊಂದಿಗೆ ಗ್ರಾಮದ ಇತರೆ ಭಾಗಗಳಿಂದ ಹೊರಟ ಉತ್ಸವ ಮಂಟಪಗಳ ಶೋಭಾಯಾತ್ರೆಯು ಹಬ್ಬಕ್ಕೆ ವಿಶೇಷ ಮೆರಗು ನೀಡುತ್ತವೆ. ಮಡಿಕೇರಿ ದಸರಾ ಮಾದರಿಯಲ್ಲಿಯೇ ನಡೆಯುವ ಉತ್ಸವಗಳ ಮೆರವಣಿಗೆ ಗ್ರಾಮದೇವತೆ ಹಬ್ಬಕ್ಕೆ ವಿಶೇಷ ಮೆರಗು ನೀಡುತ್ತವೆ.

ಮೆರವಣಿಗೆ ಸಂದರ್ಭ ವೀರಗಾಸೆ ವೀರಭದ್ರೇಶ್ವರ ಕುಣಿತ ಹಾಗೂ ಕಂಸಾಳೆ ನೃತ್ಯ ಪ್ರದರ್ಶನ ಎಲ್ಲರ ಗಮನ ಸೆಳೆಯಲಿವೆ. ಮೆರವಣಿಗೆ ಸಂದರ್ಭ ಗ್ರಾಮದ ಬಸ್ ನಿಲ್ದಾಣದ ಬಳಿ ಸಿಡಿಸುವ ಬಣ್ಣ ಬಣ್ಣದ ಆಕರ್ಷಕ ಮದ್ದುಗುಂಡುಗಳ ಪ್ರದರ್ಶನ ಹಾಗೂ ಬಾಣ ಬಿರುಸುಗಳ ಚಿತ್ತಾರ ನೋಡುಗರ ಕಣ್ಮನ ಸೆಳೆಯುತ್ತದೆ. ಈ ಹಬ್ಬಕ್ಕೆ ದೇಶ ವಿದೇಶದಲ್ಲಿ ನೆಲಸಿರುವ ಗ್ರಾಮಸ್ಥರು, ಮೈಸೂರು, ಹಾಸನ ಜಿಲ್ಲೆಗಳ ಗಡಿಭಾಗದ ಜನರು ಹಾಗೂ ಸುತ್ತಮುತ್ತಲ ಗ್ರಾಮಗಳಿಂದ ಸಾವಿರಾರೂ ಮಂದಿ ಪಾಲ್ಗೊಳ್ಳುವರು. ದೇವಸ್ಥಾನ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರು ಹಬ್ಬದ ಸಿದ್ಧತಾ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ಇಡೀ ಗ್ರಾಮವನ್ನು ಶುಚ್ಚಿಗೊಳಿಸುವ ಕಾರ್ಯವನ್ನು ಗ್ರಾ.ಪಂ.ವತಿಯಿಂದ ಕೈಗೊಳ್ಳಲಾಗಿದೆ.

ಅನ್ನದಾನ : ದೇವಸ್ಥಾನ ಸಮಿತಿ ವತಿಯಿಂದ ರಾತ್ರಿ ಅಮ್ಮನವರ ದೇವಸ್ಥಾನದಲ್ಲಿ ಭಕ್ತರಿಗೆ ಅನ್ನಸಂರ್ತಪಣೆ ವ್ಯವಸ್ಥೆ ಕೈಗೊಳ್ಳಲಾಗಿದೆ.

ಜಾನಪದ ಕ್ರೀಡಾಕೂಟ : ಗ್ರಾಮದ ಯುವಕ ಸಂಘದ ಆಶ್ರಯದಲ್ಲಿ ಡಿ.12 ಮತ್ತು 13 ರಂದು ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಎತ್ತಿನ ಗಾಡಿ ಓಟ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟ ಆಯೋಜಿಸಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!