ಪ್ರತಿಭಟನೆ

ಉಪನ್ಯಾಸಕರು, ಪ್ರಾಂಶುಪಾಲರನ್ನು ನೇಮಿಸಿ ಪದವಿ ಶಿಕ್ಷಣ ಬಲಪಡಿಸಲು ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ

ಕುಶಾಲನಗರ, ಸೆ 23: ರಾಜ್ಯದ ಸರಕಾರಿ ಪದವಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆ ವಿದ್ಯಾರ್ಥಿಗಳನ್ನು ಬಾಧಿಸುತ್ತಿದ್ದು ಅಗತ್ಯ ಖಾಯಂ/ಅತಿಥಿ ಉಪನ್ಯಾಸಕರನ್ನು ನೇಮಕ ಮಾಡುವಂತೆ ಒತ್ತಾಯಿಸಿ ಎಬಿವಿಪಿ ವತಿಯಿಂದ ಕುಶಾಲನಗರದಲ್ಲಿ ಪ್ರತಿಭಟಿಸಲಾಯಿತು.

ಹಾರಂಗಿ ರಸ್ತೆಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ‌ ನೂರಾರು ವಿದ್ಯಾರ್ಥಿಗಳು ಘೋಷಣಾ ಫಲಕಗಳನ್ನು ಹಿಡಿದು ಉಪನ್ಯಾಸಕರ ನೇಮಕಾತಿಗೆ ಆಗ್ರಹಿಸಿ ಘೋಷಣೆಗಳನ್ನು ಕೂಗಿ ಕುಶಾಲನಗರದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಕುಶಾಲನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ಕೆಲಕಾಲ ಪ್ರತಿಭಟಿಸಿದ ವಿದ್ಯಾರ್ಥಿಗಳು ರಾಜ್ಯ ಸರಕಾರದ ವಿರುದ್ದ ಧಿಕ್ಕಾರ ಕೂಗಿದರು.
ಕರ್ನಾಟಕ ರಾಜ್ಯದಲ್ಲಿ ಕಾಲೇಜು ಶಿಕ್ಷಣ ಇಲಾಖೆ ಅಡಿಯಲ್ಲಿ ಬರುವ 432 ಪದವಿ ಕಾಲೇಜುಗಳಲ್ಲಿ 6,000 ಖಾಯಂ ಉಪನ್ಯಾಸಕರಲ್ಲಿ 3000 ಕ್ಕಿಂತ ಹೆಚ್ಚು ಉಪನ್ಯಾಸಕರು ಈಗಾಗಲೇ ನಿವೃತ್ತಿ ಪಡೆದಿದ್ದು, ಇನ್ನು ಕೇವಲ 3000 ಖಾಯಂ ಉಪನ್ಯಾಸಕರೊಂದಿಗೆ 12,000 ಅತಿಥಿ ಉಪನ್ಯಾಸಕರ ಸೇವಾ ನೆರವಿನಿಂದ ಪದವಿ ತರಗತಿಗಳು ಜರುಗುತ್ತಿದೆ. ಸರಕಾರಿ ಪದವಿ ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ಪಡೆಯುವುದು ವಿದ್ಯಾರ್ಥಿಗಳ ಹಕ್ಕು. ಆದರೆ ತಮ್ಮ ಕರ್ತವ್ಯ ಪ್ರಜ್ಞೆಯನ್ನು ಮರೆತಂತಿರುವ ಸರಕಾರ ಪದವಿ ಹಂತದಲ್ಲಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಉಪನ್ಯಾಸಕರ ತೆಗೆದುಕೊಳ್ಳದಿರುವುದು ಕಳವಳಕಾರಿಯಾದ ಸಂಗತಿ.

2025-26 ನೇ ಸಾಲಿನಲ್ಲಿ ಖಾಲಿ ಇರುವ 12,000 ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು 55,000 ಅರ್ಜಿಗಳು ಸಲ್ಲಿಕೆ ಆಗಿರುತ್ತವೆ. ಈಗಾಗಲೆ ನಮ್ಮ ಎಲ್ಲಾ ವಿಶ್ವವಿದ್ಯಾಲಯಗಳ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಸಹಿತ ಇಲ್ಲಿಯವರೆಗೆ ಅತಿಥಿ ಉಪನ್ಯಾಸಕರ ನೇಮಕಾತಿ ಆಗದೆ ಇರುವ ಕಾರಣ ವಿದ್ಯಾರ್ಥಿಗಳಿಗೆ ಸರಿಯಾದ ರೀತಿಯ ತರಗತಿಗಳು ನಡೆಯುತ್ತಿಲ್ಲ. ಕನಿಷ್ಠ ಪಕ್ಷ ಅರ್ಹ ಅತಿಥಿ ಉಪನ್ಯಾಸಕರ ನೇಮಕಾತಿಗೆ ತಕ್ಷಣ ಕ್ರಮಕೈಗೊಳ್ಳಬೇಕಿದೆ ಎಂದು ಆಗ್ರಹಿಸಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕುಶಾಲನಗರ ತಹಸೀಲ್ದಾರ್ ಮೂಲಕ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭ ಎಬಿವಿಪಿ ತಾಲೂಕು ಸಂಚಾಲಕ ಪ್ರಣವ್, ಪ್ರಮುಖರಾದ ರೋಹಿತ್, ಪೂರ್ಣಚಂದ್ರ, ಜನನ್, ಲಯನ್ ಮತ್ತಿತರರು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!